ರಾಜ್ಯ ವಿಧಾನ ಸಭೆಗೆ ಮೇ 10 ರಂದು ನಡೆಯುವ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೇ ದಿನವಾದ ಸೋಮವಾರ ಒಂದೇ ದಿನ 214 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಾಗಿದೆ. ಇದರಿಂದಾಗಿ ಈವರೆಗೆ ಒಟ್ಟು 313 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.
ನಾಮಪತ್ರ ಸಲ್ಲಿಕೆಗೆ ಇನ್ನೆರಡು ದಿನ ಮಾತ್ರ ಬಾಕಿ ಇರುವಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಸಚಿವ ರೇವಣ್ಣ, ಬೆಂಕಿ ಮಹಾದೇವು ಮತ್ತಿತರ ಘಟಾನುಘಟಿಗಳು ನಾಮಪತ್ರ ಸಲ್ಲಿಸಿ ಅಖಾಡಕ್ಕೆ ಧುಮುಕಿದ್ದಾರೆ.
ಪ್ರತಿಷ್ಠಿತ ರಾಮನಗರ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜಾತ್ಯತೀತ ಜನತಾದಳ ಅಭ್ಯರ್ಥಿಯಾಗಿ ಸೋಮವಾರ ಸಾವಿರಾರು ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ರಾಮನಗರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕುಮಾರಸ್ವಾಮಿಯವರನ್ನು ಕಾರ್ಯಕರ್ತರು ತೆರೆದ ವಾಹನದಲ್ಲಿ ಅದ್ದೂರಿ ಮೆರವಣಿಗೆಯಲ್ಲಿ ಚುನಾವಣಾಧಿಕಾರಿ ಕಚೇರಿ ಇರುವ ಮಿನಿ ವಿಧಾನಸೌಧಕ್ಕೆ ಕರೆತಂದರು.
ಇದೇ ರೀತಿ ಹಾಸನ ಜಿಲ್ಲೆ ಹೊಳೇನರಸೀಪುರದಲ್ಲಿ ಕುಮಾರಸ್ವಾಮಿಯವರ ಸಹೋದರ ಎಚ್.ಡಿ.ರೇವಣ್ಣ ಅವರೂ ಭಾರೀ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಸಚಿವರಾದ ಚೆಲುವರಾಯಸ್ವಾಮಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ, ವಿ.ಸೋಮಣ್ಣ ಗೋವಿಂದರಾಜನಗರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
|