ಪ್ರಸ್ತುತ ಚುನಾವಣೆಯಲ್ಲಿ ಗೆಲ್ಲಲೇ ಬೇಕೆಂಬ ಪಣತೊಟ್ಟಿರುವ ವಿವಿಧ ಪಕ್ಷದ ಪ್ರಮುಖ ನಾಯಕರು ಎರಡೆರಡು ಕಡೆಗಳಿಂದ ಚುನಾವಣಾ ಕಣಕ್ಕೆ ಇಳಿದಿದ್ದಾರೆ.
ಈಗಾಗಲೇ ರಾಮನಗರ ಕ್ಷೇತ್ರದಲ್ಲಿ ತಮ್ಮ ನಾಮಪತ್ರ ಸಲ್ಲಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಕದ ಚನ್ನಪಟ್ಟಣ ಕ್ಷೇತ್ರದಿಂದಲೂ ಸ್ಫರ್ಧಿಸಲು ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ಕುಮಾರಸ್ವಾಮಿಯವರ ವಿರುದ್ಧ ಮಹಿಳಾ ಅಭ್ಯರ್ಥಿಯೊಬ್ಬರನ್ನು ನಿಲ್ಲಿಸಿದರೆ ಅವರು ಸೋಲುವುದು ಖಚಿತ ಎಂದು ಜ್ಯೋತಿಷಿಯೊಬ್ಬರು ಹೇಳಿರುವ ಅನುಸಾರ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ ಪುತ್ರಿ ಮಮತಾ ನಿಚ್ಚಾನಿಯವರನ್ನು ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಣಕ್ಕಿಳಿಸಲಿದೆ ಎಂದೇ ಅರ್ಥೈಸಲಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್ ಈ ತಂತ್ರವನ್ನು ಹೂಡಿದೆ ಎಂದು ಹೇಳಲಾಗುತ್ತಿದೆ.
ಜೆಡಿಎಸ್‌ನಿಂದ ಈಗಾಗಲೇ ಚನ್ನಪಟ್ಟಣ ಕ್ಷೇತ್ರಕ್ಕೆ ಅಶ್ವಥ್ ಎಂಬವರಿಗೆ ಟಿಕೆಟ್ ನೀಡಲಾಗಿದೆ. ಪಕ್ಷದ ತಂತ್ರದ ಅಂಗವಾಗಿ ಇವರ ಜೊತೆ ಕುಮಾರಸ್ವಾಮಿ ಕೂಡಾ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಅದೇ ರೀತಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತುಮಕೂರು ನಗರ ಕ್ಷೇತ್ರದಿಂದಲೂ ಸ್ಪರ್ಧಿಸಲು ಇಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಮಾತು ಕೂಡಾ ವ್ಯಾಪಕವಾಗಿ ಹರಡಿದೆ. ತಮ್ಮ ವಿರುದ್ಧ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಸ್ಪರ್ಧಿಸಿದರೆ ತಮಗೆ ಗೆಲುವು ಮರೀಚಿಕೆಯಾಗಬಹುದು ಎಂಬ ಉದ್ದೇಶದಿಂದ ಯಡಿಯೂರಪ್ಪ ಈ ನಿರ್ಧಾರ ತಳೆದಿದ್ದಾರೆ ಎನ್ನಲಾಗಿದೆ.
ಮಾಜಿ ಸಚಿವ ತುಮಕೂರಿನ ಸೊಗಡು ಶಿವಣ್ಣ ಅವರಿಗೆ ಪಕ್ಷದ ಟಿಕೆಟ್ ನೀಡಲಾಗಿದೆ. ಆದರೆ ಅವರ ಜೊತೆ ಯಡಿಯೂರಪ್ಪ ಅವರು ಸಹ ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ. ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರು ಶಿಕಾರಿಪುರದಲ್ಲಿ ಸ್ಪರ್ಧಿಸುವರೋ ಇಲ್ಲವೋ ಎಂಬುದು ಅಧಿಕೃತವಾಗಿ ಹೊರಬಿದ್ದಿಲ್ಲ. ಆದರೆ ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಸೊರಬ ಕ್ಷೇತ್ರಗಳಿಂದಲೂ ಅವರು ಸ್ಪರ್ಧಿಸಲು ಮುಂದಾಗಿದ್ದಾರೆ ಎಂಬ ಸುದ್ದಿಗಳು ಹೊರಬಿದ್ದಿವೆ.
|