ದುಷ್ಕರ್ಮಿಗಳ ಮಾರಣಾಂತಿಕ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಂಡ್ಯ ಜಿಲ್ಲಾ ಪಂಚಾಯತ್ನ ಕಾಂಗ್ರೆಸ್ ಸದಸ್ಯ ಮಹೇಶ್ ಮೃತಪಟ್ಟಿದ್ದು ಅದರ ಪರಿಣಾಮವಾಗಿ ಮಂಡ್ಯದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ.
ಮಂಗಳವಾರ ಹಾಡುಹಗಲೇ ಆಟೋದಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಹೇಶ್ ಮೇಲೆ ಹಲ್ಲೆ ಮಾಡಿ, ಮನಬಂದಂತೆ ಕೊಚ್ಚಿ, ಆಟೋ ಹಾಗೂ ಮಾರಕಾಸ್ತ್ರಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದರು.
ಮಹೇಶ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಲಾಗಿತ್ತಾದರೂ ಆತ ಚೇತರಿಸಿಕೊಳ್ಳುವ ಸಾಧ್ಯತೆಗಳು ಕಮ್ಮಿ ಎಂದು ವೈದ್ಯರು ತಿಳಿಸಿದ್ದರು. ತೀವ್ರ ರಕ್ತಸ್ರಾವವಾಗಿದ್ದರಿಂದ ಅವರನ್ನು ಬದುಕಿಸಿಕೊಳ್ಳಲಾಗಲಿಲ್ಲ ಎಂದು ಸುದ್ದಿಮೂಲಗಳು ತಿಳಿಸಿವೆ.
ಈ ಘಟನೆಗೆ ಹಳೆಯ ದ್ವೇಷವೇ ಕಾರಣ ಎಂದು ಹೇಳಲಾಗಿದೆ. ದುಷ್ಕೃತ್ಯವೆಸಗಲು ಬಳಸಿರುವ ಆಟೋ ಹಾಗೂ ಆಯುಧಗಳು ಪೊಲೀಸರ ವಶವಾಗಿದ್ದು ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವ್ಯಕ್ತಪಡಿಸಿದ್ದಾರೆ.
|