ಟಿಕೆಟ್ ಹಂಚಿಕೆಯಲ್ಲಿ ಆಗಿರುವ ತಾರತಮ್ಯ ಹಾಗೂ ಪಕ್ಷದೊಳಗಿನ ವಿದ್ಯಮಾನಗಳಿಂದ ಬೇಸತ್ತು ರಾಜೀನಾಮೆ ನೀಡುವವರ ಪಟ್ಟಿಗೆ ಇದೀಗ ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಹೆಸರು ಸೇರಿದೆ.
ಕಾಂಗ್ರೆಸ್‌ನಲ್ಲಿ ಭುಗಿಲೆದ್ದಿರುವ ಆಂತರಿಕ ಭಿನ್ನಾಭಿಪ್ರಾಯದಿಂದಾಗಿ ನಾಗರಮಾರಪಳ್ಳಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯದ ಚುನಾವಣಾ ಉಸ್ತುವಾರಿ ವಹಿಸಿರುವ ಪೃಥ್ವಿರಾಜ್ ಚೌಹಾಣ್ ಮತ್ತು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿದ ನಾಗಮಾರಪಳ್ಳಿಯವರು, ಪಕ್ಷದಲ್ಲಿನ ನೀತಿ ನಿಯಮಗಳಿಂದ ಬೇಸರಗೊಂಡು ಪಕ್ಷ ತೊರೆಯುವ ನಿರ್ಧಾರಕ್ಕೆ ಬಂದಿದ್ದೇನೆ. ಈಗಾಗಲೇ ಇತರ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ತಮ್ಮನ್ನು ಸಂಪರ್ಕಸಿದ್ದು, ಪಕ್ಷ ಸೇರುವಂತೆ ಮನವಿ ಮಾಡಿದ್ದಾರೆ. ಆದರೆ, ಈ ತಿಂಗಳ 30ರಂದು ಬೆಂಬಲಿಗರು, ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.
|