ಚುನಾವಣೆಗೆ ಇನ್ನು 9 ದಿನಗಳು ಬಾಕಿ ಉಳಿದಿರುವಂತೆಯೇ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು, ಬಿಜೆಪಿ ಮಾಜಿ ಅಧ್ಯಕ್ಷ ಎಲ್.ಕೆ.ಆಡ್ವಾಣಿ ಅವರು ಪ್ರಚಾರಕ್ಕಾಗಿ ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಇತ್ತೀಚೆಗಷ್ಟೆ ಬಿಜೆಪಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಅವರನ್ನು ಪ್ರಚಾರಕ್ಕೆ ಕರೆತಂದ ಬೆನ್ನಲ್ಲೇ ಈಗ ಅಡ್ವಾಣಿ ಆಗಮಿಸುತ್ತಿದ್ದು, ರಾಜ್ಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗಿದೆ.
ಎರಡು ದಿನಗಳ ರಾಜ್ಯ ಚುನಾವಣಾ ಪ್ರಚಾರಕ್ಕೆ ಆಗಮಿಸಲಿರುವ ಅಡ್ವಾಣಿ ಶುಕ್ರವಾರದಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಆಗಮಿಸಿ ಆನೇಕಲ್, ಚಾಮರಾಜನಗರ ಹಾಗೂ ಮೈಸೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಮಧ್ಯೆ, ಯಡಿಯೂರಪ್ಪ ಗುರುವಾರದಂದು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಮೇಲುಕೋಟೆ, ಕೆ.ಆರ್. ಪೇಟೆ, ಪಿರಿಯಾಪಟ್ಟಣ, ಶ್ರೀರಂಗಪಟ್ಟಣ ಹಾಗೂ ವರುಣಾ ಕ್ಷೇತ್ರಗಳಲ್ಲಿ ಯಡಿಯೂರಪ್ಪ ಪ್ರಚಾರ ಕಾರ್ಯವನ್ನು ಕೈಗೊಳ್ಳಲಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ತಿಳಿಸಿದೆ.
|