ಈಗ ಚುನಾವಣಾ ಆಯೋಗ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಜಿಲ್ಲಾ ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ್ ಅವರು ಚುನಾವಣಾಧಿಕಾರಿಯವರಿಗೆ ಈ ಬಗ್ಗೆ ದೂರ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಜೇವರ್ಗಿಯಲ್ಲಿ ನಾಮಪತ್ರ ಸಲ್ಲಿಸಿದ ವೇಳೆ 500ಕ್ಕೂ ಹೆಚ್ಚು ವಾಹನಗಳನ್ನು ಬಳಸಿದ್ದರು ಹಾಗೂ ಅವುಗಳನ್ನು ಸರ್ಕಾರಿ ಸ್ಥಳದಲ್ಲಿ ನಿಲ್ಲಿಸಲಾಗಿತ್ತು. ಅಲ್ಲದೆ, ಈ ಸಂದರ್ಭದಲ್ಲಿ ಸಾವಿರಕ್ಕೂ ಹೆಚ್ಚು ಜನರಿಗೆ ಊಟ ಹಾಕಿಸಿದ್ದಾರೆ ಎಂದು ಚುನಾವಣಾಧಿಕಾರಿಗೆ ಬರೆದಿರುವ ದೂರಿನಲ್ಲಿ ಅವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ. ಚುನಾವಣಾ ನೀತಿ ಸಂಹಿತೆ ಆರಂಭಗೊಂಡಂದಿನಿಂದ ಈವರೆಗೆ ಒಟ್ಟು 108 ಪ್ರಕರಣಗಳನ್ನು ಜಿಲ್ಲೆಯಲ್ಲಿ ದಾಖಲಿಸಿಕೊಳ್ಳಲಾಗಿದ್ದು ಅವುಗಳ ಪೈಕಿ 51 ಪ್ರಕರಣಗಳಿಗೆ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಆಯೋಗ ತಿಳಿಸಿದೆ.
|