ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳ ವಿರುದ್ಧ ಬಂಡಾಯ ಅಭ್ಯರ್ಥಿಗಳಾಗಿ ಚುನಾವಣಾ ಕಣಕ್ಕೆ ಇಳಿದಿರುವ ಮೂವರು ಪಕ್ಷದ ಕಾರ್ಯಕರ್ತರುಗಳನ್ನು ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.
ತರೀಕೆರೆಯ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಓಂಕಾರಪ್ಪ, ಕಡೂರು ಕ್ಷೇತ್ರದ ಬಂಡಾಯ ಅಭ್ಯರ್ಥಿ ದೇವರಾಜು ಮತ್ತು ಸಾಗರ ಕ್ಷೇತ್ರದ ಬಂಡಾಯ ಅಭ್ಯರ್ಥಿ ವಿ.ಎಚ್. ರಾಮಪ್ಪ ಅವರನ್ನು ಬಿಜೆಪಿಯು ಅಮಾನತುಗೊಳಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ಮೊದಲು ಪುತ್ತೂರು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಸೇರಿದಂತೆ ಬಿಜೆಪಿಯಿಂದ ಐವರು ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಚಾಟನೆಗೊಳಿಸಿರುವ ಬೆನ್ನಲ್ಲೆ ಬಿಜೆಪಿ ಮತ್ತೆ ಮೂವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಿಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ವಿ.ಎಚ್. ರಾಮಪ್ಪ ಹಾಗೂ ಶಕುಂತಲಾ ಶೆಟ್ಟಿಯವರು ತಮ್ಮ ತಮ್ಮ ಕ್ಷೇತ್ರದಲ್ಲಿ ಪ್ರಾಬಲ್ಯವನ್ನು ಹೊಂದಿರುವುದು ಬಿಜೆಪಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.
ಈ ಮಧ್ಯೆ ಮೂವರು ಎಸ್ಪಿ ಅಭ್ಯರ್ಥಿಗಳು ಮೊದಲ ಹಂತದ ಚುನವಣಾ ಕಣದಿಂದ ಹಿಂದಕ್ಕೆ ಸರಿದಿದ್ದು, ಬಿಜೆಪಿಪರ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಎಸ್ಪಿ ಮುಖಂಡ ಬಂಗಾರಪ್ಪ ಕಣಕ್ಕಿಳಿದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಈ ಮೂವರು ಅಭ್ಯರ್ಥಿಗಳು, ಕಣದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.
|