ಮೊದಲ ಹಂತದ ಚುನಾವಣೆಯ ಪ್ರಚಾರದ ಭರಾಟೆ ನಿಂತಿದೆ. ಇನ್ನೇನು ಚುನಾವಣೆಗೆ ಒಂದು ದಿನ ಮಾತ್ರ ಬಾಕಿ ಉಳಿದಿದೆ. ಮೊದಲ ಹಂತದ ಚುನಾವಣೆಯಲ್ಲಿ 89 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿಗಳು ಇಂದು (ಶುಕ್ರವಾರ) ಸಂಜೆಯೇ ಮತಗಟ್ಟೆಗಳಿಗೆ ತೆರಳಲಿದ್ದಾರೆ.
ಮತದಾನ ಸಮಯದಲ್ಲಿ ನಡೆಯುವ ಗಲಭೆ, ಘರ್ಷಣೆಗಳನ್ನು ತಡೆಯಲು ಈಗಾಗಲೇ 58 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರತಿ ಮತಗಟ್ಟೆಗಳ ಮೇಲೂ ಚುನಾವಣಾ ಆಯೋಗ ಹದ್ದಿನ ಕಣ್ಣಿಡಲು ಮುಂದಾಗಿದೆ.
ಈಗಾಗಲೇ ಕೆಲವು ಮತಗಟ್ಟೆಗಳನ್ನು ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಿ ಅಲ್ಲಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್‌ನ್ನು ನಿಯೋಜಿಸಲಾಗಿದೆ. 3,500 ಸೂಕ್ಷ್ಮ ಹಾಗೂ 6,252 ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ.
ಯಾವುದೇ ರಾಜಕೀಯ ಪಕ್ಷಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗ ಎಚ್ಚರಿಸಿದೆ.
|