ಕಾಂಗ್ರೆಸ್ ಮತ್ತು ಭಯೋತ್ಪಾದಕರಿಂದ ರಾಜ್ಯದಲ್ಲಿ ಮತದಾರರು ನಿರ್ಭೀತಿಯಿಂದ ಮತ ಹಾಕಲು ಹಿಂದೇಟು ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಯೋತ್ಪಾದಕರನ್ನು ಹಿಮ್ಮೆಟ್ಟಿಸುವಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ವಿಫಲವಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಭಯೋತ್ಪಾದಕರ ಅಟ್ಟಹಾಸ ಮುಗಿಲು ಮುಟ್ಟಿದೆ ಎಂದು ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ವೇಳೆ ನ್ಯಾಯಾಲಯದಲ್ಲಿ ಬಾಂಬ್ ಸ್ಪೌಟಗೊಂಡಿರುವುದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಒಂದು ಕಪ್ಪು ಚುಕ್ಕೆ. ಭಯೋತ್ಪಾದನೆಯ ಕರಿನೆರಳಲ್ಲಿ ಚುನಾವಣೆ ನಡೆಸಲು ಕಾಂಗ್ರೆಸ್ ಅಭಯ ಹಸ್ತ ನೀಡಿದೆ ಎಂದು ಅವರು ಟೀಕಿಸಿದರು.
ಕಂದಾಹಾರ್ ವಿಮಾನ ಅಪಹರಣಕಾರರನ್ನು ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಬಿಡುಗಡೆ ಮಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, 163 ಕುಟುಂಬಗಳ ರಕ್ಷಣೆ ಮಾಡಲು ಅಪಹರಣಕಾರರ ಬಿಡುಗಡೆ ಸರಕಾರಕ್ಕೆ ಅನಿವಾರ್ಯವಾಗಿತ್ತು. ಇದಕ್ಕೆ ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳು ಸಮ್ಮತಿಸಿದ್ದವು ಎಂದು ತಿಳಿಸಿದರು.
|