ಜನಸಾಮಾನ್ಯರ ಆಶೋತ್ತರಗಳಿಗೆ ಕಾಂಗ್ರೆಸ್ ಬದ್ದವಾಗಿದ್ದು, ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿ ತಿಳಿಸಿರುವ ಎಲ್ಲ ಅಂಶಗಳನ್ನು ಜಾರಿಗೊಳಿಸಲಿದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.
ನಗರದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರಾರಂಭದಿಂದಲೇ ಬಿಜೆಪಿ ಮತ್ತು ಜೆಡಿಎಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.
ಬಿಜೆಪಿ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದಿಂದಾಗಿ ಕರ್ನಾಟಕ ದಿವಾಳಿಯಾಗಿದೆ. ಕಾಂಗ್ರೆಸ್ ಅನಿವಾರ್ಯ ಕಾರಣದಿಂದಾಗಿ ಜೆಡಿಎಸ್ ಜೊತೆ ಮೈತ್ರಿ ಮಾಡಬೇಕಾಯಿತು ಎಂದ ಅವರು, ಕಾಂಗ್ರೆಸ್ಸೇತರ ಪಕ್ಷಗಳು ರಾಜ್ಯದಲ್ಲಿ ಎಂದೂ ಯಶಸ್ವಿಯಾಗಿ ಅಭಿವೃದ್ದಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಕೇಂದ್ರದಲ್ಲಿ ಯುಪಿಎ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದ್ದು, ಐತಿಹಾಸಿಕ ಯೋಜನೆಗಳನ್ನು ಜಾರಿಗೊಳಿಸಿದೆ. ರೈತರ 60 ಸಾವಿರ ಕೋಟಿ ಸಾಲಮನ್ನಾ ಮಾಡಿರುವುದು ಕಾಂಗ್ರೆಸ್‌ನ ಹೆಗ್ಗಳಿಕೆಯಾಗಿದೆ. ಅಲ್ಲದೆ, ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಂಡನೆಯಾಗಿರುವುದು ಕಾಂಗ್ರೆಸ್ ಮಹತ್ ಸಾಧನೆ ಎಂದು ಅವರು ತಿಳಿಸಿದರು.
ಈ ನಿಟ್ಟಿನಲ್ಲಿ ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಪೂರ್ಣ ಬಹುಮತದಿಂದ ಆರಿಸಬೇಕೆಂದು ಎಂದು ಅವರು ಜನತೆಯಲ್ಲಿ ಮನವಿ ಮಾಡಿದರು.
|