ಬೆಂಗಳೂರು ಹಾಗೂ ಕೋಲಾರದಲ್ಲಿ ಕಳ್ಳಭಟ್ಟಿ ಕುಡಿದು ಮೃತಪಟ್ಟ ಸಂಖ್ಯೆ 54ಕ್ಕೆ ಏರಿದ್ದು, ಇನ್ನೂ ಹಲವರು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಈ ಮದ್ಯೆ ರಾಜ್ಯಪಾಲರ ಸಲಹೆಗಾರ ತಾರಕನ್ ಅವರು ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿರುವ ಅವರು, ಸಿಸಿಬಿ ಪೊಲೀಸರಿಗೆ ಪ್ರಕರಣದ ಕುರಿತು ತನಿಖೆ ನಡೆಸುವಂತೆ ತಿಳಿಸಲಾಗಿದೆ ಎಂದರು.
ಬೆಂಗಳೂರು ಹಾಗೂ ಕೋಲಾರದಲ್ಲಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ 54ಕ್ಕೆ ಏರಿದ್ದು, 30ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ 15 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ಮೃತಪಟ್ಟವರ ಮರಣೋತ್ತರ ಪರೀಕ್ಷೆಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿದೆ.
ಈ ಮಧ್ಯೆ ಕಳ್ಳಭಟ್ಟಿ ಪ್ರಕರಣವನ್ನು ರಾಜಕೀಯ ಪಕ್ಷಗಳು ಚುನಾವಣಾ ವಿಷಯವಾಗಿ ಬಳಸಿಕೊಂಡಿವೆ. ಈ ಬಗ್ಗೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಳ್ಳಭಟ್ಟಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನೇರ ಹೊಣೆ ಎಂದು ತಿಳಿಸಿದ್ದರೆ, ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮದ್ಯದ ಹೊಳೆಯನ್ನೇ ಹರಿಸಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಪೊಲೀಸ್-ಅಬಕಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದ್ದು, ಸಾರಾಯಿ ನಿಷೇಧದ ಬಳಿಕ ಕಳ್ಳಭಟ್ಟಿ ದಂಧೆ ಹೆಚ್ಚಳವಾಗಿದೆ ಎಂದು ತಿಳಿಸಿರುವ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯನವರು, ಸಾರಾಯಿ ನಿಷೇಧದಿಂದ ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
|