ವಿಧಾನಸಭಾ ಚುನಾವಣೆಯಲ್ಲಿ ಅನುಭವಿಸಿರುವ ಸೋಲಿನ ಕುರಿತು ಆತ್ಮಾವಲೋಕನ ಮಾಡಲು ಮಂಗಳವಾರ ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ಬುಲಾವ್ ಬಂದಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ದೌಡಾಯಿಸಿದ್ದಾರೆ.
ಏತನ್ಮಧ್ಯೆ, ರಾಜ್ಯದಲ್ಲಿ ಸರಕಾರ ರಚಿಸುವ ಕುರಿತು ಮಹತ್ವಾಕಾಂಕ್ಷೆ ಹೊಂದಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಕನಸು ನುಚ್ಚುನೂರಾಗಿದೆ. ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಧರಂಸಿಂಗ್, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್.ಎಂ. ಕೃಷ್ಣ, ರಾಜ್ಯ ಚುನಾವಣಾ ಉಸ್ತುವಾರಿ ವಹಿಸಿರುವ ಪೃಥ್ವಿರಾಜ್ ಚೌಹಾಣ್‌ರನ್ನು ಹೈಕಮಾಂಡ್ ಕರೆಸಿಕೊಂಡು ಸೋಲಿನ ಕುರಿತು ಪರಾಮರ್ಶೆ ನಡೆಸುತ್ತಿದೆ.
ಈ ಮಧ್ಯೆ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ ಪ್ರತಿಪಕ್ಷದ ನಾಯಕನನ್ನು ಕೂಡ ಆಯ್ಕೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ನಾಳೆ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಅಧ್ಯಕ್ಷರನ್ನಾಗಿ ಆಯ್ಕೆಯಾಗುವುದು ಬಹುತೇಕ ನಿಶ್ಚಯವಾಗಿದೆ.
ಧರಂ ಮಹಾರಾಷ್ಟ್ರ ರಾಜ್ಯಪಾಲ ಈ ನಡುವೆ ಜೇವರ್ಗಿಯಲ್ಲಿ ಪ್ರಥಮ ಬಾರಿಗೆ ಸೋಲಿನ ರುಚಿ ಕಂಡಿರುವ ಧರಂ ಸಿಂಗ್‌ರನ್ನು ಮಹಾರಾಷ್ಟ್ರ ರಾಜ್ಯಪಾಲರನ್ನಾಗಿ ಮಾಡುವ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿದೆ. ಎಸ್.ಎಂ. ಕೃಷ್ಣರಿಗೆ ಕೇಂದ್ರ ಮಂತ್ರಿ ಸ್ಥಾನ ನೀಡುವ ಕುರಿತು ಸಹ ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
|