ರಾಜ್ಯ ಕಾಂಗ್ರೆಸ್ ಶಾಸಕಾಂಗ ಸಭೆಯ ನಾಯಕ ಪಟ್ಟ ಕೊನೆಗೂ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದಕ್ಕಿದೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಉಸ್ತುವಾರಿ ವಹಿಸಿದ್ದ ಪೃಥ್ವಿರಾಜ್ ಚೌಹಾಣ್ ಈ ವಿಷಯವನ್ನು ತಿಳಿಸಿದ್ದಾರೆ. ನಾಯಕನ ಆಯ್ಕೆಯನ್ನು ಹೈಕಮಾಂಡ್ ನಿರ್ಧರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಈ ಮೂಲಕ ಎರಡನೇ ಬಾರಿಗೆ ಪ್ರತಿಪಕ್ಷದ ನಾಯಕನಾಗಿ ಖರ್ಗೆ ಆಯ್ಕೆಯಾಗಿದ್ದಾರೆ.
ಪ್ರಾರಂಭದಿಂದಲೂ ಗೊಂದಲದ ವಾತಾವರಣದಿಂದ ಕೂಡಿದ್ದ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಜಿ. ಪರಮೇಶ್ವರ್, ಸೋಮಣ್ಣ ಸೇರಿದಂತೆ ಹಲವು ನಾಯಕರು ಪ್ರತಿಪಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಸಿದ್ದರು. ಕೊನೆಗೆ ಆಯ್ಕೆ ವಿಷಯದಲ್ಲಿ ಗೊಂದಲ ಉಂಟಾದಾಗ ಹೈಕಮಾಂಡ್ ನಿರ್ಧಾರಕ್ಕೆ ಮೊರೆ ಹೋಗಬೇಕಾಯಿತು. ಈ ಸಂದರ್ಭದಲ್ಲಿ ಹೈಕಮಾಂಡ್ ಖರ್ಗೆ ಹೆಸರನ್ನು ಸೂಚಿಸುವ ಮೂಲಕ ಆಯ್ಕೆ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಸಿದ್ದರಾಮಯ್ಯ ಅಸಮಾಧಾನ? ವಿಪಕ್ಷ ನಾಯಕ ಸ್ಥಾನಾಕಾಂಕ್ಷಿಯಾಗಿದ್ದ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಈ ಆಯ್ಕೆಯಿಂದಾಗಿ ಅಸಮಾಧಾನಗೊಂಡಿದ್ದಾರೆ. ಚುನಾವಣೆಯಲ್ಲಿ ಇವರ ಬೆಂಬಲಿಗರೆಲ್ಲರೂ ಗೆಲ್ಲುವ ಮೂಲಕ ಕಾಂಗ್ರೆಸ್ ಮರ್ಯಾದೆಯನ್ನು ಉಳಿಸಿದ್ದಾರೆ. ಈ ನಿಟ್ಟಿನಲ್ಲಿ ಈ ಬಾರಿಯ ಪ್ರತಿಪಕ್ಷ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆಯಾಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಕೊನೆ ಕ್ಷಣದ ನಾಟಕೀಯ ಬೆಳವಣಿಗೆಯಲ್ಲಿ ಪಟ್ಟ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ, ಕಾರ್ಯಕರ್ತರಿಗೆ ಕೂಡ ಈ ಆಯ್ಕೆ ಕುರಿತು ಅಚ್ಚರಿ ಮೂಡಿದೆ ಎಂದು ತಿಳಿದು ಬಂದಿದೆ.
|