ಸಂಪುಟ ದರ್ಜೆಯ ಸಚಿವರ ಸ್ಥಾನಮಾನ ಹಾಗೂ ಚುನಾವಣೆಯಲ್ಲಿ ಪಕ್ಷದ ಸಾಮರ್ಥ್ಯ ಕುರಿತಂತೆ ಎರಡು ದಿನಗಳ ಬಿಜೆಪಿ ಕಾರ್ಯಕಾರಣಿ ಸಭೆ ಜೂನ್ 1ರಿಂದ ನವದೆಹಲಿಯಲ್ಲಿ ಪ್ರಾರಂಭವಾಗಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಸದಾನಂದಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಗಳಿಸಿದ ಸಾಮರ್ಥ್ಯ, ಪಕ್ಷದ ಚಟುವಟಿಕೆಗಳು, ಇನ್ನಿತರ ವಿದ್ಯಮಾನಗಳ ಕುರಿತು ಸಭೆಯಲ್ಲಿ ವಿವರಣೆ ನೀಡಲಾಗುವುದು. ಸಭೆಯು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜ್‌ನಾಥ್ ಸಿಂಗ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ತಿಳಿಸಿದರು.
ಅಲ್ಲದೆ, ಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಸಂಘಟಿಸುವುದು, ಇತ್ತೀಚಿನ ರಾಜಕೀಯ ಬೆಳವಣಿಗೆ ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಈ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ದೆಹಲಿಗೆ ತೆರಳಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ದೆಹಲಿಗೆ ತೆರಳುತ್ತಿರುವ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಲಿದ್ದಾರೆ. ಅಲ್ಲದೆ, ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿಯೂ ಭಾಗವಹಿಸಲಿದ್ದಾರೆ.
|