ರಸಗೊಬ್ಬರ ಹಾಗೂ ಬಿತ್ತನೆ ಬೀಜ ಖರೀದಿಸಲು ಆಗಮಿಸಿದ್ದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ರೈತರ ಹೆಸರಿನಲ್ಲಿ ಪ್ರಮಾನ ವಚನ ಸ್ವೀಕರಿಸಿರುವ ಮುಖ್ಯಮಂತ್ರಿಯವರು ರೈತರ ಮೇಲೆಯೇ ದೌರ್ಜನ್ಯ ಎಸಗಿದ್ದಾರೆ ಎಂದು ಅವರು ಯಡಿಯೂರಪ್ಪ ಸರಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪನವರು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಅನೇಕ ಜಿಲ್ಲೆಗಳಲ್ಲಿ ಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆ ಉಂಟಾಗಿದ್ದರೂ, ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಅವರು ನೂತನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲಾಗಿ ಬಿಜೆಪಿ ಆಂತರಿಕ ಭಿನ್ನಮತ ಶಮನಗೊಳಿಸುವ ಕೆಲಸದಲ್ಲಿಯೇ ಮಗ್ನವಾಗಿದೆ. ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸಿ ಅಧಿಕಾರಕ್ಕೆ ಬಂದಿದೆ. ರೈತರಿಗೆ ಉಚಿತ ವಿದ್ಯುತ್ ನೀಡುವ ಭರವಸೆಯೂ ಹುಸಿಯಾಗಿದೆ ಎಂದು ಅವರು ತಿಳಿಸಿದರು.
ಜಂಟಿ ಅಧಿವೇಶನಕ್ಕೆ ಕುರಿತಂತೆ ರಾಜ್ಯಪಾಲರೊಂದಿಗೆ ವಿವಾದ ಮಾಡಿಕೊಳ್ಳುವ ಅಗತ್ಯವಿರಲಿಲ್ಲ. ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬಂದಿದ್ದರೆ ಅಂಥ ಸಂದರ್ಭ ಉದ್ಭವವಾಗುತ್ತಿರಲಿಲ್ಲ ಎಂದು ಅವರು ತಿಳಿಸಿದರು.
|