ವಿಧಾನ ಸಭೆಯಲ್ಲಿ ಶಾಸಕರ ಸ್ಥಾನಗಳು ಹೆಚ್ಚಿಗೆ ಇಲ್ಲದ ಕಾರಣ ತಮ್ಮ ಪಕ್ಷವು ಸ್ಪೀಕರ್ ಹುದ್ದೆಗೆ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಿಲ್ಲ ಎಂದು ಜೆಡಿಎಸ್‌ನ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ವಿಧಾನಸಭೆಯ ವಿಶೇಷ ಅಧಿವೇಶನಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸ್ಥಾನವನ್ನು ಗಳಿಸಿಕೊಂಡಿಲ್ಲ. ಅಲ್ಲದೆ, ಅಧಿಕೃತವಾಗಿ ವಿರೋಧ ಪಕ್ಷವಾಗಿರುವ ಕಾಂಗ್ರೆಸ್‌ನೊಂದಿಗೆ ಕೂಡ ಸ್ಪೀಕರ್ ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಕುರಿತು ಯಾವುದೇ ಮಾತುಕತೆಗಳು ಜೆಡಿಎಸ್‌ನೊಂದಿಗೆ ನಡೆಸಿಲ್ಲ ಎಂದು ತಿಳಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮನ್ನು ಭೇಟಿ ಮಾಡಿದ್ದು, ಸೌಜನ್ಯಕ್ಕೆ ಹೊರತು, ಇದಕ್ಕೆ ಪ್ರತ್ಯೇಕ ಅರ್ಥ ಕಲ್ಪಿಸುವಂತಿಲ್ಲ. ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ರೈತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯತ್ತ ಗಮನ ಹರಿಸಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಅಭಾವದಿಂದಾಗಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.
ಅವಿರೋಧ ಆಯ್ಕೆ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಬಿಜೆಪಿ ಶಾಸಕ ಜಗದೀಶ್ ಶೆಟ್ಟರ್ ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ 13ನೇ ವಿಧಾನಸಭೆಯ ಸ್ಪೀಕರ್ ಆಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
|