ವಿಧಾನಸಭೆಯ ಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಸ್ಪರ್ಧಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಸ್ಪೀಕರ್ ಸ್ಥಾನಕ್ಕೆ ಹಿರಿಯ ಬಿಜೆಪಿ ಶಾಸಕ ಜಗದೀಶ್ ಶೆಟ್ಟರ್ ಆಯ್ಕೆ ಬಹುತೇಕ ಖಚಿತವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ವಿಧಾನಸಭಾ ಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಪಕ್ಷ ನಿರ್ಧರಿಸಿದೆ ಎಂದು ತಿಳಿಸಿದರು.
ಸದನದಲ್ಲಿ ಸಂಸದೀಯ ಪಟುಗಳ ಕೊರತೆ ಕಂಡುಬಂದಿದೆ. ಸಭಾ ನಡವಳಿಕೆ ಕುರಿತು ಅರಿತಿರುವ ಸದಸ್ಯರು ಕಡಿಮೆ ಸಂಖ್ಯೆಯಲ್ಲಿದ್ದಾರೆ ಎಂದು ಅಭಿಪ್ರಾಯಿಸಿದ ಖರ್ಗೆ, ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಧರಂಸಿಂಗ್ ಅನುಪಸ್ಥಿತಿ ಸದನದಲ್ಲಿ ಎದ್ದು ಕಾಣುತ್ತದೆ. ಇದು ಬಹಳ ಬೇಸರದ ಸಂಗತಿ ಎಂದು ತಿಳಿಸಿದರು.
ಸದನದಲ್ಲಿ ಶಾಸಕರ ವಿರುದ್ಧ ಖರ್ಗೆ ಕಿಡಿ ಸದನದಲ್ಲಿ ನೂತನ ಸರ್ಕಾರದ ಶಾಸಕರು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಸದನದಲ್ಲಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಖರ್ಗೆ ಈ ವಿಷಯ ಪ್ರಸ್ತಾಪಿಸಿದರು.
|