ಬೆಂಗಳೂರು: ಬುಧವಾರ ರಾತ್ರಿಯಿಂದ ಜಾರಿಗೆ ಬರುವಂತೆ ಪೆಟ್ರೊಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕೇಂದ್ರದ ಈ ನಿರ್ಧಾರವನ್ನು ಖಂಡಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ತೈಲ ಬೆಲೆ ಏರಿಕೆ ಶ್ರೀಸಾಮಾನ್ಯರ ಮೇಲೆ ಹೊರೆಯಾಗುತ್ತದೆ. ಇದರಿಂದ ಸಹಜವಾಗಿ ಎಲ್ಲಾ ವಸ್ತುಗಳ ಬೆಲೆಗಳು ಏರಿಕೆಯಾಗುತ್ತದೆ ಎಂದು ತಿಳಿಸಿದರು.
ಅಲ್ಲದೆ, ತೈಲ ಬೆಲೆ ಏರಿಕೆಯಿಂದಾಗಿ ಜನರ ಪರಸ್ಥಿತಿ ಹದಗೆಡುತ್ತದೆ. ಈಗಾಗಲೇ ಹಣದುಬ್ಬರದಿಂದ ತತ್ತರಿಸಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಶೀಘ್ರವೇ ತೈಲ ಬೆಲೆ ಏರಿಕೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.
ಹಣದುಬ್ಬರದಿಂದಾಗಿ ತೈಲ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ತಿಳಿಸಿದ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಗಳ ಬೆಲೆ ಏಕಾಏಕಿ ಏರಿರುವುದರಿಂದ ದೇಶದಲ್ಲಿ ತೈಲ ಹಾಗೂ ಎಲ್ಪಿಜಿಗಳ ದರಗಳಲ್ಲಿ ಏರಿಕೆ ಅನಿವಾರ್ಯ ಎಂದು ತಿಳಿಸಿದರು.
|