ವಿಧಾನಸಭಾ ಚುನಾವಣೆಯಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿ ಮೂಡಿಬಂದಿರುವ ಕಾಂಗ್ರೆಸ್‌ಗೆ ಉಪ ಸಭಾಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಗುರುವಾರ ನಗರದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಸಂವಿಧಾನ ಪ್ರಕಾರ ಉಪಸಭಾಧ್ಯಕ್ಷ ಸ್ಥಾನವನ್ನು ಪ್ರತಿಪಕ್ಷಕ್ಕೆ ನೀಡಬೇಕೆಂದು ಅವರು ಒತ್ತಾಯಿಸಿದರು.
ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ತೈಲ ಬೆಲೆ ಏರಿಸಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗಿರುವುದರಿಂದ ದೇಶದಲ್ಲಿ ಅದು ಅನಿವಾರ್ಯವಾಗಿದೆ. ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸಿದೆ. ಇದೇ ರೀತಿಯಲ್ಲಿ ರಾಜ್ಯದಲ್ಲೂ ತೆರಿಗೆಯನ್ನು ಕಡಿಮೆ ಮಾಡಬೇಕೆಂದು ನೂತನ ಸರಕಾರವನ್ನು ಒತ್ತಾಯಿಸಿದರು.
|