ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ಕುಮಾರ್ ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ಎರಡೂವರೆ ಎಕರೆ ಭೂಮಿ ಮಂಜೂರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದು, ಇದರಿಂದಾಗಿ ರಾಜ್ ಸ್ಮಾರಕದ ಕುರಿತಾಗಿದ್ದ ಗೊಂದಲ ಸ್ವಲ್ಪ ಮಟ್ಟಿದೆ ಕಡಿಮೆಯಾಗಿದೆ.
ನೂತನವಾಗಿ ನಿರ್ಮಾಣವಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಟ್ಟಡವನ್ನು ಉದ್ಘಾಟಿಸಿದ ನಂತರ ಈ ವಿಷಯವನ್ನು ಪ್ರಕಟಿಸಿದರು.ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಕನ್ನಡ ಚಿತ್ರರಂಗಕ್ಕೆ ಡಾ.ರಾಜ್ ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.ಅಂತಹ ಮೇರುನಟನ ಸ್ಮಾರಕ ನಿರ್ಮಾಣಕ್ಕೆ ಈಗಾಗಲೇ ಆರು ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇಲ್ಲಿ ಭವ್ಯವಾದ ಸಭಾಂಗಣ ಹಾಗೂ ಮ್ಯೂಸಿಯಂ ನಿರ್ಮಾಣಕ್ಕೆ ನಾಲ್ಕು ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ರಾಷ್ಟ್ತ್ರಪ್ರಶಸ್ತಿ ಪಡೆದ ಕಲಾವಿದರನ್ನು ಶೀಘ್ರದಲ್ಲಿಯೇ ಸರ್ಕಾರದ ವತಿಯಿಂದ ಸನ್ಮಾನಿಸಲಾಗುವುದು ಎಂದ ಮುಖ್ಯಮಂತ್ರಿ ಕಲಾವಿದರ ಸಮಸ್ಯೆಗಳೆನ್ನಿದ್ದರೂ ಅದನ್ನು ಪರಿಹರಿಸಲು ಸರ್ಕಾರ ಸಿದ್ಧವಿದೆ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು, ರೀಮೇಕ್ ಚಿತ್ರಗಳಿಗೆ ತೆರಿಗೆ ವಿನಾಯಿತಿ ನೀಡುವುದು, ಪೈರಸಿಗೆ ಗೂಂಡಾ ಕಾಯ್ದೆ ಬಗ್ಗೆ ಚರ್ಚಿಸಲು ಶೀಘ್ರವೇ ಚಿತ್ರರಂಗದ ಪ್ರಮುಖರ ಸಭೆ ಕರೆಯಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ವಿಷ್ಣುವರ್ಧನ್, ಮಂಡಳಿ ಅಧ್ಯಕ್ಷ ತಲ್ಲಂ ನಂಜುಂಡ ಶೆಟ್ಟಿ, ಮುಖ್ಯಮಂತ್ರಿ ಚಂದ್ರು ಹಾಗೂ ಪಾರ್ವತಮ್ಮ ರಾಜ್‌ಕುಮಾರ್ ಉಪಸ್ಥಿತರಿದ್ದರು.
|