ವಿಧಾನಸಭಾ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕಿಳಿದ ಜೆಡಿಎಸ್ನ ಆತ್ಮಾವಲೋಕನ ಸಭೆಯು ಶನಿವಾರ ನಗರದ ಅರಮನೆ ಮೈದಾನದಲ್ಲಿ ನಡೆಯಿತು.
ಸಭೆಯಲ್ಲಿ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜಿಲ್ಲಾ ಘಟಕಗಳ ಸದಸ್ಯರು ಸೇರಿದಂತೆ ಜೆಡಿಎಸ್ನ ಹಲವು ನಾಯಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲಾಯಿತು. ಅಲ್ಲದೆ, ಮುಂಬರುವ ವಿಧಾನಪರಿಷತ್ ಚುನಾವಣೆ ಹಾಗೂ ಲೋಕಸಭಾ ಚುನಾವಣೆಗೆ ಪಕ್ಷದ ವತಿಯಿಂದ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳನ್ನು ಮರೆತು ಪಕ್ಷವನ್ನು ಮುನ್ನಡೆಸುವಲ್ಲಿ ಸಹಕಾರ ನೀಡಬೇಕೆಂದು ಕರೆ ನೀಡಿದರು.
ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷವನ್ನು ಬಲಪಡಿಸಬೇಕಿದೆ. ಈ ನಿಟ್ಟಿನಲ್ಲಿ ಶೀಘ್ರದಲ್ಲಿ ಪಕ್ಷದ ವತಿಯಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದ ಪಡಿಸಲಾಗುವುದು ಎಂದು ಅವರು ತಿಳಿಸಿದರು.
|