ರಾಜ್ಯಸಭೆ, ವಿಧಾನಪರಿಷತ್ತಿನ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಯಲ್ಲಿ ಜೆಡಿಎಸ್‌ನೊಂದಿಗೆ ಕೈಜೋಡಿಸಿರುವ ಬಗ್ಗೆ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆಯ ಚುನಾವಣೆಯಲ್ಲಿ ಎರಡನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ದೇವೇಗೌಡರ ಜತೆ ಹೊಂದಾಣಿಕೆ ಮಾಡಿಕೊಂಡು, ಪಕ್ಷಕ್ಕೆ ಸಿಗಬೇಕಾದ ವಿಧಾನಪರಿಷತ್ತಿನ ಒಂದು ಸ್ಥಾನವನ್ನು ಬಿಟ್ಟುಕೊಟ್ಟಿರುವುದು ಸಿದ್ದರಾಮಯ್ಯ ಅವರ ಆಕ್ರೋಶಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಸೇರಿ ಎರಡು ವರ್ಷವಾಗುತ್ತಾ ಬಂದರೂ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಿಲ್ಲ. ಚುನಾವಣೆಯ ವೇಳೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಿದ್ದನ್ನು ಬಿಟ್ಟರೆ ಟಿಕೆಟ್ ಹಂಚಿಕೆಯಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಈಗ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಕಡೆಗೆಣಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಯಾವುದೇ ಕಾರಣಕ್ಕೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಬಾರದೆಂದು ದೂರವಾಣಿ ಮುಖಾಂತರ ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ. ಒಂದು ವೇಳೆ ಹೊಂದಾಣಿಕೆ ಮಾಡಿಕೊಂಡಲ್ಲಿ ನನ್ನ ನಿಲುವು ಏನೆಂಬುದನ್ನು ಮುಂದೆ ತಿಳಿಸುತ್ತೇನೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
|