ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣದ ಕೇಂದ್ರ ಬಿಂದು ಅತುಲ್ ರಾವ್ ಅವರನ್ನು ಹೈಕೋರ್ಟ್‌ಗೆ ಹಾಜರುಪಡಿಸುವಂತೆ ಪೊಲೀಸರಿಗೆ ಸೂಚನೆ ನೀಡಬೇಕೆಂದು ಅತುಲ್ ಪತ್ನಿ ಮೀರಾ ರಾವ್ ಸಲ್ಲಿಸಿದ್ದ ಅರ್ಜಿಯನ್ನು ಅವರು ವಾಪಾಸ್ ಪಡೆದಿದ್ದಾರೆ.
ಮೀರಾ ಅರ್ಜಿ ಸಲ್ಲಿಸುತ್ತಿದ್ದಂತೆ, ಪತ್ರಿಕಾಗೋಷ್ಠಿ ನಡೆಸಿದ ಪೊಲೀಸ್ ಮಹಾನಿರ್ದೇಶಕ ಕೆ. ಆರ್. ಶ್ರೀನಿವಾಸ್, ಅತುಲ್ ರಾವ್ ರಾಜ್ಯ ಪೊಲೀಸರ ವಶದಲ್ಲಿದ್ದಾನೆ. ಆತನನ್ನು ದೆಹಲಿ ಪೊಲೀಸರು ಬಂಧಿಸಿಲ್ಲ. ಕೆಲವು ಗೌಪ್ಯ ಮಾಹಿತಿಗಳನ್ನು ಕಲೆ ಹಾಕುವ ನಿಟ್ಟಿನಲ್ಲಿ ಅವರನ್ನು ಪೊಲೀಸರ ವಶದಲ್ಲಿ ಇಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮೀರಾ ಅವರು ಅರ್ಜಿಯನ್ನು ವಾಪಾಸ್ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
ಸಿಬಿಐ ತನಿಖೆ ಇಲ್ಲ ಪದ್ಮಪ್ರಿಯಾ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದಿಲ್ಲ ಎಂದು ಗೃಹ ಸಚಿವ ವಿ.ಎಸ್. ಆಚಾರ್ಯ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತನಿಖೆಯನ್ನು ಕರ್ನಾಟಕ ರಾಜ್ಯ ಪೊಲೀಸರೇ ನಿರ್ವಹಿಸಲಿದ್ದು, ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯ ಪೊಲೀಸರು ಪ್ರಕರಣವನ್ನು ನಿಷ್ಠೆಯಿಂದ ನಿರ್ವಹಿಸುತ್ತಾರೆ ಎಂಬ ನಂಬಿಕೆ ಇರುವಾಗಿ ಸಿಬಿಐಗೆ ಒಪ್ಪಿಸುವುದೇತಕ್ಕೆ ಎಂದು ಪ್ರಶ್ನಿಸಿದ ಅವರು, ಶೀಘ್ರವೇ ಪ್ರಕರಣದ ಅಂತಿಮ ಮಾಹಿತಿ ಲಭ್ಯವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
|