ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಪ್ರಾರಂಭಗೊಂಡಿದ್ದರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತಾದ ಅಂತಿಮ ನಿರ್ಧಾರ ಗುರುವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ಕೈಗೊಳ್ಳಲಾಗುವುದು ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.
ಶೈಕ್ಷಣಿಕ ವರ್ಷ ಈಗಾಗಲೇ ಪ್ರಾರಂಭಗೊಂಡಿದೆ. ಜನಸಾಮಾನ್ಯರು ಹಾಗೂ ವಿದ್ಯಾರ್ಥಿಗಳ ಪೋಷಕರು ವರ್ಗಾವಣೆ ಮಾಡುವುದರಿಂದ ಶಾಲಾ ಚಟುವಟಿಕೆಗಳಿಗೆ ತೊಂದರೆಯಾಗುತ್ತದೆ ಎಂದು ಆತಂಕಗೊಂಡಿದ್ದಾರೆ. ಅವರ ಅಭಿಪ್ರಾಯದಂತೆ ಇಂತಹ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಶಿಕ್ಷಕರ ವೇತನದ ಕುರಿತು ಮಾತನಾಡಿದ ಅವರು, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಪ್ರತಿ ತಿಂಗಳು ಸಕಾಲಕ್ಕೆ ವೇತನ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳಾಗುವುದು ಎಂದು ತಿಳಿಸಿದರು.
ಈ ವರ್ಷದಲ್ಲಿ ಪಠ್ಯಪುಸ್ತಕಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಆತಂಕಗೊಂಡಿದ್ದರು. ಇನ್ನು ಮುಂದೆ ಪಠ್ಯಪುಸ್ತಕಗಳು ಸಕಾಲಕ್ಕೆ ವಿದ್ಯಾರ್ಥಿಗಳಿಗೆ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
|