ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿಸಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಮಾಡಿಕೊಳ್ಳಲಾದ ಮೈತ್ರಿ ಕೇವಲ ತಾತ್ಕಾಲಿಕ. ಈ ಮೈತ್ರಿ ಮುಂದಿನ ಲೋಕಸಭೆಯಲ್ಲಿಯೂ ಮುಂದುವರೆಯಲಿದೆಯೇ ಎಂಬುದು ಆಗಿನ ಪರಿಸ್ಥಿತಿಯ ಮೇಲೆ ಅವಲಂಬಿತವಾಗಿರುತ್ತದೆ ಎಂದು ತಿಳಿಸಿದರು.
ಜೆಡಿಎಸ್‌ನಲ್ಲಿ ದೇವೇಗೌಡರ ನಿರ್ಧಾರವೇ ಅಂತಿಮ. ಆದರೆ ಕಾಂಗ್ರೆಸ್‌ನಲ್ಲಿ ಈ ರೀತಿಯ ನಿರ್ಧಾರಗಳನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಜೆಡಿಎಸ್‌ನೊಂದಿಗೆ ಮಾಡಿಕೊಂಡಿರುವ ಮೈತ್ರಿ ಇದೇ ಮೊದಲೇನಲ್ಲ. ಈ ಹಿಂದೆಯೂ ಅನೇಕ ಬಾರಿ ಮೈತ್ರಿ ಮಾಡಿಕೊಂಡಿದ್ದೇವೆ. ಇದರಲ್ಲೇನು ವಿಶೇಷತೆ ಇಲ್ಲ ಎಂದು ಅವರು ತಿಳಿಸಿದರು.
ರೈತರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವಲ್ಲಿ ವಿಫಲವಾಗಿರುವ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ಧೋರಣೆ ವಿರುದ್ಧ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
|