ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡ ಬಗ್ಗೆ ಮುನಿಸಿಕೊಂಡಿರುವ ಮಾಜಿ ಉಪಮುಖ್ಯಮಂತ್ರಿ ಸಿದ್ಧರಾಮಯ್ಯ ಈಗ ಬಿಜೆಪಿಯತ್ತ ಚಿತ್ತ ಹರಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಎಂ.ಪಿ. ನರೇಂದ್ರ ಸ್ವಾಮಿ ಅವರು ನಗರದ ಖಾಸಗಿ ಹೊಟೇಲ‌್ ಒಂದರಲ್ಲಿ ಸಿದ್ದರಾಮಯ್ಯ ಜೊತೆ ನಡೆಸಿದ ಮಹತ್ವದ ಮಾತುಕತೆ ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಪಕ್ಷ ತಮ್ಮನ್ನು ಕಡೆಗೆಣಿಸುತ್ತಿದೆ ಎಂದು ಇತ್ತೀಚೆಗಷ್ಟೇ ಬೇಸರಗೊಂಡಿದ್ದ ಸಿದ್ದರಾಮಯ್ಯ ಪಕ್ಷ ಬಿಡುವ ಯೋಚನೆ ಮಾಡಿದ್ದರು ಎನ್ನಲಾಗಿದೆ. ಅಲ್ಲದೆ, ಮುಂದಿನ ಲೋಕಸಭೆಯಲ್ಲೂ ಜೆಡಿಎಸ್ ಜೊತೆ ಕೈ ಜೋಡಿಸುವ ಕುರಿತು ಕಾಂಗ್ರೆಸ್ ಚಿಂತನೆ ನಡೆಸುತ್ತಿರುವುದು ಸಿದ್ದರಾಮಯ್ಯನವರಿಗೆ ನುಂಗಲಾರದ ಬಿಸಿತುಪ್ಪವಾಗಿತ್ತು.
ಈ ಎಲ್ಲಾ ಬೆಳವಣಿಗೆಯಿಂದ ಕೈ ಬಿಡುವ ಯೋಚನೆಯಲ್ಲಿದ್ದ ಸಿದ್ದರಾಮಯ್ಯನವರಿಗೆ ಕಮಲ ಆಸರೆಯಾಗಿದೆ. ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಮುನ್ನುಗ್ಗುತ್ತಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಪಕ್ಷ ಸೇರ್ಪಡೆಗೊಂಡರೆ ಒಳಿತು ಎಂಬ ಅಭಿಪ್ರಾಯ ಬಿಜೆಪಿಯಲ್ಲಿ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರನ್ನು ಪಕ್ಷಕ್ಕೆ ಕರೆಸಿಕೊಳ್ಳಲು ತಂತ್ರ ರೂಪಿಸಿದೆ. ಆದರೆ ಇದರಿಂದ ಕಾಂಗ್ರೆಸ್ ತುಂಬಲಾರದ ನಷ್ಟವಾಗಿ ಪರಿಣಮಿಸುವುದರಲ್ಲಿ ಎರಡು ಮಾತಿಲ್ಲ. ಇನ್ನು ಒಂದೆರಡು ವಾರದಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಹೊರಬರುವ ನಿರೀಕ್ಷೆ ವ್ಯಕ್ತವಾಗಿದೆ.
|