ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಸೇರ್ಪಡೆಗೊಂಡರೆ ಅವರನ್ನು ಪಕ್ಷ ಸ್ವಾಗತಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಕುರಿತು ರಾಜ್ಯಮಟ್ಟದಲ್ಲಿ ಯಾವುದೇ ಮಾತುಕತೆಯಾಗಿಲ್ಲ. ಆದರೆ ಅವರು ಪಕ್ಷಕ್ಕೆ ಬಂದರೆ ಸ್ವಾಗತಿಸುವುದಾಗಿ ತಿಳಿಸಿದರು.
ಇದುವರೆಗೆ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಎಲ್ಲರಿಗೂ ಉನ್ನತ ಸ್ಥಾನವನ್ನು ನೀಡಲಾಗಿದೆ. ಯಾರ ಸ್ಥಾನಮಾನಕ್ಕೂ ಚ್ಯುತಿ ಬರದಂತೆ ಪಕ್ಷ ನಡೆಸಿಕೊಂಡಿದೆ ಎಂದು ಅವರು ತಿಳಿಸಿದರು.
ಹಣದುಬ್ಬರ ಕೇಂದ್ರದ ವೈಫಲ್ಯ: ಇದೇ ಸಂದರ್ಭದಲ್ಲಿ ಹಣದುಬ್ಬರದ ಕುರಿತು ಮಾತನಾಡಿದ ಅವರು, ಕೇಂದ್ರ ಸರಕಾರದ ನೀತಿಯಿಂದಾಗಿ ಹಣದುಬ್ಬರ ದರವನ್ನು ಎರಡಂಕಿ ಮೊತ್ತವನ್ನು ದಾಟಿದೆ. ಇದರಿಂದ ಸಾಮಾನ್ಯರ ಜನ ಜೀವನದ ಮೇಲೆ ಪರಿಣಾಮ ಬೀರುವುದರಲ್ಲಿ ಸಂಶಯವಿಲ್ಲ. ಇದು ಕೇಂದ್ರ ಸರಕಾರದ ಆರ್ಥಿಕ ನೀತಿಯಲ್ಲಿನ ವಿಫಲತೆಯನ್ನು ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಪಕ್ಷ ತೊರೆಯುವುದಿಲ್ಲ: ಖರ್ಗೆ ಏತನ್ಮಧ್ಯೆ, ಸಿದ್ದರಾಮಯ್ಯ ಪಕ್ಷ ಬಿಟ್ಟು ತೆರಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಬಗೆಗಿನ ಏನೇ ಭಿನ್ನಾಭಿಪ್ರಾಯಗಳಿದ್ದರೂ, ಹೈಕಮಾಂಡ್ ಜೊತೆಯಲ್ಲಿ ಚರ್ಚಿಸಿ ಬಗೆಹರಿಸಲಾಗುವುದು. ಮಾಧ್ಯಮಗಳಲ್ಲಿ ಪ್ರಕಟವಾಗಿರುವಂತೆ ಸಿದ್ದರಾಮಯ್ಯ ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ಮುಂದೆಯೂ ಸಿದ್ದರಾಮಯ್ಯ ಪಕ್ಷದಲ್ಲಿಯೇ ಇರಲಿದ್ದಾರೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಜೆಡಿಎಸ್ ಜೊತೆಗಿನ ಹೊಂದಾಣಿಕೆ ಕುರಿತು ಖರ್ಗೆ ನೀಡಿರುವ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಕೇವಲ ವೈಯಕ್ತಿಕ ಹೇಳಿಕೆ. ಜೆಡಿಎಸ್ ಜೊತೆಗಿನ ಹೊಂದಾಣಿಕೆ ರಾಜ್ಯಸಭೆ ಹಾಗೂ ವಿಧಾನಪರಿಷತ್‌ಗೆ ಮಾತ್ರ ಸೀಮಿತ. ಮುಂದಿನ ನಿರ್ಧಾರವೇನಿದ್ದರೂ ಹೈಕಮಾಂಡಿಗೆ ಬಿಟ್ಟದ್ದು ಎಂದು ತಿಳಿಸಿದರು.
ಮೈಸೂರಿನಲ್ಲಿ ಸಿದ್ದರಾಮಯ್ಯ ಭಾರತೀಯ ಜನತಾಪಕ್ಷವನ್ನು ಸೇರುತ್ತಾರೆ ಎಂಬ ಊಹಾಪೋಹಗಳನ್ನು ತಳ್ಳಿ ಹಾಕಿದ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಬಿಟ್ಟು ಬೇರೆ ಪಕ್ಷಗಳ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
|