ರಾಜ್ಯಕ್ಕೆ ಸಮರ್ಪಕ ಪ್ರಮಾಣದ ರಸಗೊಬ್ಬರ ಬಿಡುಗಡೆ ಮಾಡುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಲು ಶೀಘ್ರದಲ್ಲಿಯೇ ದಿಲ್ಲಿಗೆ ಸರ್ವಪಕ್ಷ ನಿಯೋಗವನ್ನು ಕರೆದೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಗೊಬ್ಬರ ಪೂರೈಸುವುದು ಕೇಂದ್ರ ಸರಕಾರದ ಜವಾಬ್ದಾರಿ. ಅಗತ್ಯ ಪ್ರಮಾಣದ ರಸಗೊಬ್ಬರವನ್ನು ಬಿಡುಗಡೆ ಮಾಡುವಂತೆ ಈ ಹಿಂದೆ ಕೇಂದ್ರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದೆ. ಯಾವುದೇ ಪ್ರಯೋಜನವಾಗಿಲ್ಲ.ಮತ್ತೆ ಕೇಂದ್ರದ ಮೇಲೆ ಒತ್ತಡ ಹೇರಲು ಸಂಸದರು ಸೇರಿದಂತೆ ಸರ್ವ ಪಕ್ಷ ನಾಯಕರ ನಿಯೋಗವನ್ನು ಪ್ರಧಾನಿ ಬಳಿ ಕರೆದೊಯ್ಯಲು ಸರಕಾರ ನಿರ್ಧರಿಸಿದೆ ಎಂದರು.
ರಸಗೊಬ್ಬರ ಪರ್ಯಾಯವಾಗಿ ಸಾವಯವ ಗೊಬ್ಬರ ಬಳಕೆ ಉತ್ತೇಜಿಸಲು ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚನೆ ನೀಡಲಾಗಿದೆ. ನೈಸರ್ಗಿಕ ಕೃಷಿಗೆ ಸರಕಾರ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ತಿಳಿಸಿದರು.
ಇತ್ತೀಚೆಗೆ ರಾಜ್ಯದಲ್ಲಿ ಸಂಭವಿಸಿದ ರೈತರ ಆತ್ಮಹತ್ಯೆ ಕಾರಣಗಳ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.
|