ಬಿಎಸ್ಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಉಚ್ಚಾಟಿತಗೊಂಡಿರುವ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಮುಂದಿನ ರಾಜಕೀಯ ನಡೆ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು ಸಿಂಧ್ಯಾರನ್ನು ಪಕ್ಷದಿಂದ ಉಚ್ಚಾಟಿಸಿರುವ ಬೆನ್ನಲ್ಲೆ ರಾಷ್ಟ್ರೀಯ ಪಕ್ಷಗಳು ತಮ್ಮತ್ತ ಸೆಳೆಯಲು ಪ್ರಯತ್ನ ನಡೆಸುತ್ತಿವೆ.
ಪ್ರಸ್ತುತ ಖಾಸಗಿ ಭೇಟಿ ನಿಮಿತ್ತ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಸಿಂಧ್ಯಾ ಅವರನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳು, ಬಿಎಸ್ಪಿಯಿಂದ ಉಚ್ಚಾಟನೆಗೊಂಡಿರುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
ರಾಜ್ಯದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿರುವ ಸಿಂಧ್ಯಾ ಅವರನ್ನು ಸೆಳೆಯಲು ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದ್ದು, ಮಾತುಕತೆ ನಡೆಸಲು ಮುಂದಾಗಿದೆ. ಈ ಮಧ್ಯೆ ಹಲವಾರು ನಾಯಕರನ್ನು ತನ್ನ ತೆಕ್ಕೆಗೆ ಹಾಕಿಕೊಂಡಿರುವ ಬಿಜೆಪಿಯೂ ಕೂಡ ಈಗಾಗಲೇ ಸಿಂಧ್ಯಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಸಂಬಂಧ ಪ್ರಯತ್ನ ನಡೆಸುತ್ತಿದೆ.
ಕಳೆದ ಕೆಲವು ದಿನಗಳ ಹಿಂದೆ ಸಿದ್ದರಾಮಯ್ಯ ಬಿಜೆಪಿಗೆ ಸೇರುವ ಬಗ್ಗೆ ಸುದ್ದಿ ಹಬ್ಬಿತ್ತಾದರೂ, ಸ್ವತಃ ಸಿದ್ದರಾಮಯ್ಯನವರೇ ಈ ವಿಚಾರವನ್ನು ತಳ್ಳಿ ಹಾಕಿದ್ದರು. ಈ ನಡುವೆ ಸಿದ್ದರಾಮಯ್ಯ ಅವರನ್ನು ಬಿಎಸ್ಪಿಗೆ ಸೇರಿಸಿಕೊಳ್ಳಲು ಸಿಂಧ್ಯಾ ಉತ್ಸುಕತೆ ತೋರಿದ್ದರು. ಆದರೆ ಕ್ಷಿಪ್ರ ಬೆಳವಣಿಗೆಯಲ್ಲಿ ಸಿಂಧ್ಯಾ ಅವರೇ ಪಕ್ಷದಿಂದ ಉಚ್ಚಾಟನೆಗೊಂಡಿದ್ದಾರೆ.
ಚುನಾವಣೆಗೆ ಒಂದು ತಿಂಗಳ ಹಿಂದೆ ರಾಜ್ಯದಲ್ಲಿ ಬಿಎಸ್ಪಿಯನ್ನು ಕಟ್ಟಿ ಬೆಳೆಸಲು ಶ್ರಮಿಸಿದ್ದ ಗೋಪಾಲ್ ಅವರನ್ನೇ ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಇದೀಗ ಸಿಂಧ್ಯಾ ಸರದಿ.
|