ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭಗೊಂಡ ದಿನದಿಂದ ಒಂದಲ್ಲ ಒಂದು ಸಮಸ್ಯೆ ಸುಳಿಯಲ್ಲಿ ಸಿಕ್ಕಿಹಾಕಿಕೊಂಡಿತ್ತು. ಈಗ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಕರೆದೊಯ್ಯುವ ಟ್ಯಾಕ್ಸಿಯೊಂದು ಪಾದಚಾರಿಯೊಬ್ಬರನ್ನು ಬಲಿ ತೆಗೆದುಕೊಂಡಿದ್ದರಿಂದ ಉದ್ರಿಕ್ತಗೊಂಡ ಸ್ಥಳೀಯರು ರಸ್ತೆ ತಡೆ ನಡೆಸಿದ್ದಾರೆ.
ಮಂಗಳವಾರ ರಾತ್ರಿ ಒಂಬತ್ತರ ಸುಮಾರಿಗೆ ಬೆಟ್ಟಹಲಸೂರು ಬಳಿಯಲ್ಲಿನ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಸೊಣ್ಣಪ್ಪಮ್ಮಯ್ಯ ದೊಡ್ಡತಿಮ್ಮಯ್ಯ ಎಂಬುವವರು ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಟ್ಯಾಕ್ಸಿ ಡಿಕ್ಕಿ ಹೊಡೆದು ಹೊರಟು ಹೋಗಿದೆ.
ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ರಸ್ತೆ ತಡೆ ನಡೆಸಿದ್ದಾರೆ. ಇದರಿಂದಾಗಿ ಬೆಂಗಳೂರು-ಹೈದ್ರಾಬಾದ್ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಾಹನಗಳಿಗೆ ಕಲ್ಲು ತೂರಾಟ ನಡೆಸಿದ ಸ್ಥಳೀಯರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸ್ಥಳಕ್ಕಾಗಮಿಸಿದ ಎಸಿಪಿ ಅಶೋಕ್ ಕುಮಾರ್ ಪರಿಸ್ಥಿತಿ ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಪ್ರಕರಣವನ್ನು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
|