ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 2 ರೂ. ಸಹಾಯಧನ, ಸಾವಯವ ಕೃಷಿಗೆ ಪ್ರೋತ್ಸಾಹ ಸೇರಿದಂತೆ ರೈತರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಮುಂಗಡ ಪತ್ರದಲ್ಲಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ರೈತ ನಾಯಕರ ಸಭೆ ನಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ ಪ್ರತಿ ಲೀಟರ್ ಹಾಲಿಗೆ 2 ರೂ. ಸಹಾಯಧನವನ್ನು ನೀಡಲಾಗುವುದು. ಅಂತೆಯೇ, ರಾಜ್ಯದಲ್ಲಿ ಒಟ್ಟು ಕೃಷಿ ಭೂಮಿಯಲ್ಲಿ ಪ್ರತಿ ವರ್ಷ ಶೇ.20ರಷ್ಟು ಜಮೀನನ್ನು ಕೃಷಿಗೆ ಅಳವಡಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ರೈತ ಮುಖಂಡರು ನೀಡಿರುವ ಉತ್ತಮ ಸಲಹೆಗಳನ್ನು ಜಾರಿಗೊಳಿಸಲಾಗುವುದು ಹಾಗೂ ರಾಜ್ಯಪಾಲರ ಆಡಳಿತದಲ್ಲಿ ಕಬ್ಬು ಬೆಳೆಗೆ 160 ರೂ. ಬೆಂಬಲ ಬೆಲೆ ನೀಡಿಕೆ ಕುರಿತು ಘೋಷಣೆಯನ್ನು ಕೂಡಲೇ ಜಾರಿಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಅಲ್ಲದೆ, ರಾಜ್ಯದಲ್ಲಿನ ಕೆರೆಗಳ ಪುನರುಜ್ಜೀವನಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದು ಹಾಗೂ ಕೆರೆ ಒತ್ತುವರಿ ವಿರುದ್ಧ ಕಠಿಣ ಕ್ರಮಗಳ ಕುರಿತು ಬಜೆಟಿನಲ್ಲಿ ತಿಳಿಸಲಾಗುವುದು ಎಂದು ಅವರು ತಿಳಿಸಿದರು.
|