ವೇಗ ನಿಯಂತ್ರಕ ಅಳವಡಿಕೆ ಹಿಂತೆಗೆತ, ಸೇವಾ ತೆರಿಗೆ ರದ್ದು, ಡೀಸೆಲ್ ಮೇಲಿನ ಶುಲ್ಕ ಇಳಿಕೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೇಶದೆಲ್ಲೆಡೆ ಲಾರಿ ಮಾಲೀಕರ ಸಂಘವು ಕರೆದಿರುವ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅಗತ್ಯ ವಸ್ತುಗಳ ಸರಬರಾಜಿಗೆ ವಿನಾಯಿತಿ ನೀಡಲಾಗಿದ್ದರೂ, ಲಾರಿ ಮುಷ್ಕರದಿಂದ ಸಾರ್ವಜನಿಕರ ಮೇಲೆ ನೇರ ಪರಿಣಾಮ ಉಂಟಾಗಿದೆ. ಮರಳು, ಕಬ್ಬಿಣ, ಸಿಮೆಂಟ್, ತೈಲ ಸೇರಿದಂತೆ ಪ್ರತಿಯೊಂದು ವಸ್ತುಗಳನ್ನು ವಿತರಿಸುವ ಮಾಲೀಕರು ಹಾಗೂ ಖರೀದಿಸುವ ಗ್ರಾಹಕರಿಗೆ ಮುಷ್ಕರದ ಬಿಸಿ ತಟ್ಟಿದೆ.
ಈ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದ್ದು, ಕೃಷಿ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಲಾರಿ ಮುಷ್ಕರ ಇನ್ನೆರಡು ದಿನ ಮುಂದುವರಿದರೆ ಅಗತ್ಯ ವಸ್ತುಗಳ ಬೆಲೆಗಳೂ ಹೆಚ್ಚಳವಾಗುವ ಸಾಧ್ಯತೆ ಕಂಡು ಬಂದಿದೆ.
ರಾಜ್ಯದೆಲ್ಲೆಡೆ ಲಾರಿ ಮುಷ್ಕರ ಶಾಂತಿಯುತವಾಗಿ ನಡೆಯುತ್ತಿದ್ದು, ಇದುವರೆಗೆ ಯಾವುದೇ ಅಹಿತಕರ ಘಟನೆ ನಡೆದಿರುವ ಬಗ್ಗೆ ವರದಿ ಬಂದಿಲ್ಲ ಎಂದು ಬೆಂಗಳೂರು ನಗರದ ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿಪಿನ್ ಗೋಪಾಲಕೃಷ್ಣ ತಿಳಿಸಿದ್ದಾರೆ.
ಈ ಮಧ್ಯೆ, ಹಾಸನ ಜಿಲ್ಲಾ ಲಾರಿ ಮಾಲೀಕರ ಸಂಘ ಮುಷ್ಕರದಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದು, ಎಂದಿನಂತೆ ಕಾರ್ಯ ನಿರ್ವಹಿಸುತ್ತಿದೆ. ಅಲ್ಲದೆ, ದಕ್ಷಿಣ ಕನ್ನಡದಲ್ಲೂ ಎಂದಿನಂತೆ ಲಾರಿಗಳು ಕಾರ್ಯ ನಿರ್ವಹಿಸುತ್ತಿದೆ ಎಂದು ವರದಿ ಬಂದಿದೆ.
|