ರಾಮನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರಗತಿಯಲ್ಲಿರುವ ಯೋಜನೆಗಳಿಗೆ ತಡೆ ಹಾಕುವ ಪ್ರಯತ್ನವನ್ನು ಬಿಜೆಪಿ ನೇತೃತ್ವದ ರಾಜ್ಯ ಸರಕಾರ ನಡೆಸುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆರೋಪಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರದಲ್ಲಿ ಉದ್ದೇಶಿತ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯಕ್ಕೆ ಭೂಮಿ ಮಂಜೂರಾಗುವ ಮೊದಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಹಣ ಬಿಡುಗಡೆ ಮಾಡಿದ್ದರು. ಅಲ್ಲದೆ, ಕೇಂದ್ರ ಸರಕಾರ ಕೂಡ ಈ ಯೋಜನೆಗೆ ಸುಮಾರು 80 ಕೋಟಿರೂ. ಗಳನ್ನು ಬಿಡುಗಡೆ ಮಾಡಿದೆ. ಆದರೆ ಈ ಯೋಜನೆಯನ್ನು ಸ್ಥಳಾಂತರಿಸುವ ಕುರಿತು ಈಗ ರಾಜ್ಯ ಸರಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದರು.
ಈ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ರಾಜಕೀಯ ದ್ವೇಷ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ತಮ್ಮನ್ನು ಮತ್ತು ಕುಮಾರಸ್ವಾಮಿ ಅವರನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ವಕ್ತಾರ ವೈಎಸ್.ವಿ.ದತ್ತಾ, ಶೀಘ್ರದಲ್ಲಿ ಬರಲಿರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಈಗಿನಿಂದಲೇ ಸಿದ್ದಗೊಳ್ಳಲಿದೆ. ಈ ನಿಟ್ಟಿನಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಪಕ್ಷದ ಸಭೆ ನಡೆಯಲಿದ್ದು, ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲಿದೆ ಎಂದು ತಿಳಿಸಿದ್ದಾರೆ.
|