ರಾಜ್ಯದ ಸ್ಥಿತಿಗತಿಗಳ ಬಗ್ಗೆ ಕೇಂದ್ರಕ್ಕೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಾಹಿತಿಗಳು ದೆಹಲಿಗೆ ದೌಡಾಯಿಸುವ ಮೂಲಕ ಸಾಹಿತಿಗಳು ಜಾತಿ ರಾಜಕಾರಣಕ್ಕೆ ಒಳಗಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಹಿತಿಗಳ ಬಗ್ಗೆ ಗೌರವವಿದೆ. ಆದರೆ ಅವರು ಜಾತಿ ವ್ಯಾಮೋಹದಿಂದ ಹೊರಬರಬೇಕು ಹಾಗೂ ರಾಜಕಾರಣ ಮಾಡುವುದನ್ನು ಬಿಟ್ಟು ರಾಜ್ಯದ ಗೌರವ ಎತ್ತಿ ಹಿಡಿಯುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದ್ದಾರೆ.
ರೈತರು 10 ಎಚ್.ಪಿ. ತನಕ ನೀರಾವರಿ ಪಂಪ್ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವುದಾಗಿ ಬಿಜೆಪಿ ಚುನಾವಣೆಗೂ ಮೊದಲೇ ತಿಳಿಸಿತ್ತು. ಇದೀಗ ಈ ಘೋಷಣೆಯನ್ನು ತಕ್ಷಣವೇ ಜಾರಿಗೆ ತರಬೇಕೆಂದು ಆಗ್ರಹಿಸಿದ ಅವರು, 10 ಎಚ್.ಪಿ. ತನಕ ನೀರಾವರಿ ಪಂಪ್ಸೆಟ್ ಹೊಂದಿದ್ದ ರೈತರು ಬಿಲ್ ಪಾವತಿಸಬಾರದೆಂದು ಕರೆ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ರಾಮನಗರದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ಸ್ಥಳಾಂತರ ಮಾಡಲು ಅವಕಾಶ ನೀಡುವುದಿಲ್ಲ. ಇದಕ್ಕೆ ಸರಕಾರ ಪ್ರಯತ್ನಿಸಿದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
|