ಹಾವೇರಿ ಗೋಲಿಬಾರ್ ಪ್ರಕರಣದಲ್ಲಿ ಗುಂಡೇಟಿನಿಂದ ಗಂಭೀರ ಗಾಯಗೊಂಡಿದ್ದ ರೈತ ಪುಟ್ಟಪ್ಪ ಹೊನ್ನತ್ತಿ ನಿಧನ ಹೊಂದಿದ್ದಾರೆ.
ತೀವ್ರ ಗಾಯಗೊಂಡಿದ್ದ ಅವರನ್ನು ಇತ್ತೀಚೆಗೆ ಬೆಂಗಳೂರಿನ ಸಂಜಯಗಾಂಧಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಉಸಿರಾಟದ ಸಮಸ್ಯೆಯಿಂದ ಬಳಲಿದ ಹೊನ್ನತ್ತಿ ಕೊನೆಯುಸಿರೆಳೆದಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಮಂಗಳವಾರ ಹಾವೇರಿಯಲ್ಲಿ ನಡೆಯಲಿದೆ.
ಈ ಘಟನೆಯಿಂದಾಗಿ ಹಾವೇರಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗದಂತೆ ತಡೆಯಲು ಬಿಗಿ ಬಂದೋ ಬಸ್ತ್ ಮಾಡಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ನಿಟ್ಟಿನಲ್ಲಿ ಹಾವೇರಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ರಸಗೊಬ್ಬರಕ್ಕಾಗಿ ರೈತರು ಹಾವೇರಿಯಲ್ಲಿ ಪ್ರತಿಭಟನೆ ನಡೆಸಿದ ವೇಳೆ ಉದ್ವಿಗ್ನಗೊಂಡ ರೈತರು ಬಸ್‌ಗಳ ಮೇಲೆ ಕಲ್ಲುತೂರಾಟ ನಡೆಸಿದ್ದರು. ಈ ಸಂದರ್ಭದಲ್ಲಿ ನಡೆಸಿದ ಗೋಲಿಬಾರ್ಗೆ ರೈತ ಸಿದ್ಲಿಂಗಪ್ಪ ಚೂರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಿಂದ ತೀವ್ರ ಗಾಯಗೊಂಡಿದ್ದ ಪುಟ್ಟಪ್ಪ ಹೊನ್ನತ್ತಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿತ್ತು. ಆದರೆ ಅದೂ ಕೂಡ ಫಲಕಾರಿಯಾಗಲಿಲ್ಲ.
|