ರಾಜ್ಯ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಪಕ್ಷೇತರರನ್ನು ಕಡೆಗೆಣಿಸಲಾಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿರುವ ಬೆನ್ನಲ್ಲೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಐದು ಜನ ಪಕ್ಷೇತರರನ್ನೂ ಐದು ವರ್ಷಗಳ ಕಾಲ ಮಂತ್ರಿಯಾಗಿ ಉಳಿಸಿಕೊಳ್ಳುತ್ತಾರೆ ಎಂಬ ನಂಬಿಕೆ ಪಕ್ಷೇತರರಿಗೆ ಇದೆ ಎಂದು ಪಕ್ಷೇತರ ಶಾಸಕ, ಸಣ್ಣ ಕೈಗಾರಿಕೆ ಮತ್ತು ರೇಷ್ಮೆ ಸಚಿವ ವೆಂಕಟರಮಣಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಪಕ್ಷಗಳ ಶಾಸಕರನ್ನು ಬಿಜೆಪಿಗೆ ಕರೆಸಿಕೊಂಡು ಪಕ್ಷವನ್ನು ಬಲಗೊಳಿಸಲಾಗುತ್ತಿದೆ. ಈ ಬೆಳವಣಿಗೆಯಿಂದ ಪಕ್ಷೇತರರಿಗೆ ಸಚಿವ ಸ್ಥಾನ ತಪ್ಪಲಿದೆ ಎಂಬ ಭಾವನೆ ನಮಗಿಲ್ಲ ಎಂದು ತಿಳಿಸಿದ್ದಾರೆ.
ಐದು ವರ್ಷಗಳ ಕಾಲ ಸರಕಾರ ನಡೆಸಲು ಬಿಜೆಪಿಗೆ ಪಕ್ಷೇತರ ಶಾಸಕರ ಸಂಪೂರ್ಣ ಬೆಂಬಲವಿದೆ ಎಂದು ಅಂದೇ ತಿಳಿಸಿದ್ದೆವು. ಕೊಟ್ಟ ಮಾತನ್ನು ಉಳಿಸಿಕೊಳ್ಳಲಿದ್ದೇವೆ. ಅದೇ ರೀತಿ ಐದು ವರ್ಷಗಳ ಕಾಲ ಸಚಿವ ಸ್ಥಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದು ಅವರು ತಿಳಿಸಿದರು.
ಈ ಮಧ್ಯೆ ಬಿಜೆಪಿ ಸರಕಾರಕ್ಕೆ ಬೆಂಬಲ ನೀಡಿರುವ ಪಕ್ಷೇತರರು ಶೀಘ್ರವೇ ಸಭೆ ನಡೆಸಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಿದ್ದೇವೆ ಎಂದು ಸಕ್ಕರೆ ಖಾತೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
|