ರಾಜ್ಯದಲ್ಲಿ ನಡೆಯುತ್ತಿರುವ ಪಕ್ಷಾಂತರಕ್ಕೆ ಪ್ರಚೋದನೆ ನೀಡುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, ಸರಕಾರವನ್ನು ತಕ್ಷಣವೇ ವಜಾಗೊಳಿಸಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಿದೆ.
ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯ ಬಳಿಕ ಕಾಂಗ್ರೆಸ್ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲರ ರಾಮೇಶ್ವರ್ ಠಾಕೂರ್ ಅವರಿಗೆ ಮನವಿ ಪತ್ರ ಸಲ್ಲಿಸಿತು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದು ಬಂದಿರುವ ಆನಂದ್ ಆಸ್ನೋಟಿಕರ್, ನರಸಿಂಹರಾಜು ಹಾಗೂ ಜಗ್ಗೇಶ್ ಅವರುಗಳನ್ನು ಬಿಜೆಪಿ ನಾಯಕರು ಹಣದ ಆಮಿಷವೊಡ್ಡಿ ಪಕ್ಷಕ್ಕೆ ಕರೆಸಿಕೊಂಡಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.
ಯಡಿಯೂರಪ್ಪನವರು ತಮ್ಮ ಸರಕಾರವನ್ನು ಉಳಿಸಿಕೊಳ್ಳಲು ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ. ಇದರ ಹಿಂದೆ ಕೋಟ್ಯಂತರ ರೂ. ಹಸ್ತಾಂತರವಾಗಿದ್ದು, ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಪತ್ರದಲ್ಲಿ ಕೋರಲಾಗಿದೆ. ಅಲ್ಲದೆ, ಸರಕಾರ ನಡೆಸುತ್ತಿರುವ ಈ ಕೃತ್ಯಗಳಿಗೆ ರಾಜ್ಯಪಾಲರು ಅವಕಾಶ ಮಾಡಿಕೊಡಬಾರದು. ಕೂಡಲೇ ಸರಕಾರವನ್ನು ವಜಾಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ನಾಯಕರು ಪತ್ರದಲ್ಲಿ ವಿವರಿಸಿದ್ದಾರೆ.
|