ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡ ಘಟನೆ ಇಲ್ಲಿನ ಸಮೀಪದ ಶಾಲೆಯೊಂದರಲ್ಲಿ ಶುಕ್ರವಾರ ಸಂಭವಿಸಿದೆ.
ಮುಧೋಳ ತಾಲೂಕಿನ ಮಂಟೂರು ಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡರು. ಕೂಡಲೇ ಹತ್ತಿರದ ಮುಧೋಳ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದರೂ, ಭಯ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಸ್ವಸ್ಥಗೊಂಡ ಕೆಲವು ಮಕ್ಕಳು ಚೇತರಿಸಿಕೊಂಡಿದ್ದಾರೆ.
ಕಳೆಪೆ ಗುಣಮಟ್ಟದ ಆಹಾರ ಸೇವನೆಯಿಂದ ಈ ಘಟನೆ ಸಂಭವಿಸಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಹೆತ್ತವರು ಆಕ್ರೋಶಗೊಂಡಿದ್ದು, ಶಾಲೆಯ ಆಡಳಿತ ಮಂಡಳಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಆದೇಶಿಸಿದ್ದಾರೆ.
|