ರಸಗೊಬ್ಬರದ ಅಭಾವದ ಅಬ್ಬರ ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿದೆ. ರೈತರು ರಸಗೊಬ್ಬರಕ್ಕಾಗಿ ಆಗ್ರಹಿಸಿ ಸೋಮವಾರ ಉಗ್ರ ಪ್ರತಿಭಟನೆ ನಡೆಸಿದ್ದಾರೆ.
ಕುಣಿಗಲ್ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಜಮಾಯಿಸಿದ್ದ ರೈತ ಸಂಘದ ಸದಸ್ಯರು ಸೇರಿದಂತೆ ನೂರಾರು ರೈತರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ರಸ್ತೆ ತಡೆ ನಡೆಸಿದರು. ಕಳೆದ ಕೆಲವು ದಿನಗಳಿಂದ ಸೂಕ್ತ ಪ್ರಮಾಣದಲ್ಲಿ ರಸಗೊಬ್ಬರ ದೊರಕದೆ ರೈತರು ಕಂಗಾಲಾಗಿದ್ದಾರೆ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಹಾರಿಕೆಯ ಉತ್ತರ ನೀಡುತ್ತಾರೆ ಎಂದು ರೈತರು ಆರೋಪಿಸಿದ್ದಾರೆ.
ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ನಡೆಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ರೈತರ ಪ್ರತಿಭಟನೆಯಿಂದ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಸಂಚಾರ ಅಸ್ತವ್ಯಸ್ಥಗೊಂಡಿತ್ತು.
ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಹಾಗೂ ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್ ಗೌಡ, ಈ ಸಮಸ್ಯೆಯನ್ನು ಶುಕ್ರವಾರದೊಳಗೆ ಬಗೆಹರಿಸಲಾಗುವುದು ಎಂದು ರೈತರಿಗೆ ಆಶ್ವಾಸನೆ ನೀಡಿದರು. ಬಳಿಕ ರೈತರು ಪ್ರತಿಭಟನೆ ಹಿಂದಕ್ಕೆ ಪಡೆದುಕೊಂಡಿದ್ದಾರೆ.
|