ರೈತರಿಗೆ ಕೃಷಿಯ ಕುರಿತು ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಸಾವಿರ ರೈತರನ್ನು ಚೀನಾ ಪ್ರವಾಸಕ್ಕೆ ಕಳುಹಿಸಲು ಸರ್ಕಾರ ತೀರ್ಮಾನಿಸಿದ್ದು, ಈ ಪ್ರವಾಸಕ್ಕೆ 20 ಕೋಟಿ ರೂ. ವಿಶೇಷ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಸದನದಲ್ಲಿ ಬುಧವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೈತರಪರ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದ್ದು, ಕಾಫಿತೋಟದ ಕಾರ್ಮಿಕರಿಗೂ ಇನ್ನು ಮುಂದೆ ಬಿಪಿಎಲ್ ಕಾರ್ಡ್ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.
ಮಲೆ ಮಹದೇಶ್ವರದ ಅಭಿವೃದ್ದಿಗೆ 2ಕೋಟಿ ರೂ. ನಿಗದಿ ಮಾಡಲಾಗಿದೆ. ಅಂತೆಯೇ ತುಂಗಾಭದ್ರಾ ಡ್ಯಾಂ ಬಳಿ ಪಾರ್ಕ್ ನಿರ್ಮಾಣಕ್ಕೆ 4 ಕೋಟಿ ರೂ. ಹಣವನ್ನು ಸರ್ಕಾರ ಬಿಡುಗಡೆ ಮಾಡಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಅಲ್ಲದೆ, ಶಾಸಕರ ನಿಧಿಯನ್ನು 1.5 ಕೋಟಿ ರೂ. ಏರಿಕೆ ಮಾಡಲಾಗುವುದು ಎಂದು ತಿಳಿಸಿದ ಅವರು, ನಗರದಲ್ಲಿ ಸಂಸ್ಕೃತ, ವೇದ ವಿದ್ಯಾಲಯ ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ ಎಂದು ತಿಳಿಸಿದರು.
|