ನಗರದಲ್ಲಿ ಸೋಮವಾರ ಡಿವೈಎಫ್ಐ ಮತ್ತು ಸಿಪಿಎಂ ಕಾರ್ಯಕರ್ತರ ಮೇಲೆ ನಡೆಸಿರುವ ಲಾಠಿ ಪ್ರಹಾರವನ್ನು ತೀವ್ರವಾಗಿ ಖಂಡಿಸಿರುವ ಸಿಪಿಎಂ ನಾಯಕರು ಇದು ಬಿಜೆಪಿ ಸರ್ಕಾರದ ನಡೆಸುತ್ತಿರುವ ದಬ್ಬಾಳಿಕೆಯನ್ನು ಎತ್ತಿತೋರಿಸುತ್ತದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಪಿಎಂನ ಮಾಜಿ ಶಾಸಕ ಶ್ರೀರಾಮ ರೆಡ್ಡಿ, ಬಿಜೆಪಿ ಸರ್ಕಾರ ಬಂದಾಗಿನಿಂದ ಹಲವು ಕಡೆಗಳಲ್ಲಿ ಇಂತಹ ಪ್ರಕರಣಗಳು ನಡೆದಿವೆ. ಪೊಲೀಸ್ ದೌರ್ಜನ್ಯ ಹೆಚ್ಚಾಗಿದೆ ಎಂದು ದೂರಿದರು.
ಈ ಘಟನೆಯಲ್ಲಿ ಸುಮಾರು 10ಕ್ಕಿಂತಲೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸ್ಥಳೀಯ ಸರ್ಕಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಆಗಮಿಸಿದ್ದು, ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯವೆಸಗಿದ್ದಾರೆ. ಈ ಬಗ್ಗೆ ಸೂಕ್ತ ನಡೆಸಲು ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ನೀರಿನ ಬಿಲ್ ನೀಡಿಕೆಯಲ್ಲಿ ಅವ್ಯವಹಾರ ನಡೆಸಿದೆ ಎಂದು ಆರೋಪಿಸಿ ಈ ಸಂಘಟನೆಗಳ ಕಾರ್ಯಕರ್ತರು ಸಲ್ಲಿಸಿದ ಮನವಿಯನ್ನು ಸ್ವೀಕರಿಸದ ಮೇಯರ್ ಲಾಠಿ ಪ್ರಹಾರಕ್ಕೆ ಆದೇಶ ನೀಡಿದ್ದರಿಂದ ಹಲವು ಮಂದಿ ಗಾಯಗೊಂಡಿದ್ದರು. ಇದರಿಂದ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
|