ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅವ್ಯವಸ್ಥೆ ಪರಿಶೀಲನೆಗೆ ವಿಧಾನಮಂಡಲದ ಜಂಟಿ ಸದನ ಸಮಿತಿ ಸದ್ಯದಲ್ಲೇ ರಚನೆ ಆಗಲಿದೆ. ಈ ಮೂಲಕ ಅವ್ಯವಸ್ಥೆಗಳ ಬಗ್ಗೆ ಸ್ಥಳ ಪರಿಶೀಲನೆ ನಡೆಸುವ ಸಮಿತಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ತನ್ನ ಶಿಫಾರಸು ಮಾಡಲಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ತಿಳಿಸಿದರು.
ಅಲ್ಲದೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತರದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಬಿಐಎಎಲ್‌ಗೆ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಎಂದು ನಾಮಕರಣ ಮಾಡಿದ್ದರೂ, ತೀರಾ ಕಳಪೆ ಗುಣಮಟದ್ದಾಗಿದೆ ಎಂದು ದೂರಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಗೆ ಹಾಗೂ ಪ್ರಯಾಣಿಕರಿಗೆ ಸೂಕ್ತ ಸೌಲಭ್ಯಗಳಿಲ್ಲ. ಅಲ್ಲದೆ, ಸರ್ಕಾರ ಮಂಜೂರು ಮಾಡಿದ್ದ ನೀಲ ನಕ್ಷೆಯನ್ನೇ ಸಂಸ್ಥೆ ಬದಲಾಯಿಸಿದೆ ಎಂದು ಆರೋಪಿಸಿದ ಅವರು, ನಿರ್ಮಾಣ ವೆಚ್ಚವನ್ನು ನೀಡಿ ಗುತ್ತಿಗೆಯನ್ನು ರದ್ದು ಪಡಿಸಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಹೇಳಿದರು.
|