ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡುವ ವಿಚಾರವಾಗಿ ಶುಕ್ರವಾರ ದೆಹಲಿಯಲ್ಲಿ ನಡೆಯಬೇಕಿದ್ದ ಭಾಷಾತಜ್ಞರ ಸಭೆಗೆ ಮದ್ರಾಸ್ ಹೈಕೋರ್ಟ್ ತಡೆ ನೀಡಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಸಾವಿರಾರು ಇತಿಹಾಸವಿರುವ ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಪಡೆಯಲು ಎಲ್ಲಾ ಅರ್ಹತೆಗಳನ್ನು ಹೊಂದಿದ್ದು, ಇದನ್ನು ಪಡೆಯುವುದು ನಮ್ಮ ಹಕ್ಕಾಗಿದೆ. ಆದರೆ ಈ ಬಗ್ಗೆ ತಮಿಳುನಾಡು ಆಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಗುಡುಗಿದ್ದಾರೆ.
ಇದನ್ನು ಪಡೆಯುವುದಕ್ಕಾಗಿ ಯಾವುದೇ ತ್ಯಾಗಕ್ಕೂ ನಾವು ಸಿದ್ದವಾಗಿದ್ದೇವೆ. ಪ್ರಾಣ ಹೋದರೂ ಸರಿ ಸಂಘಟನೆ ಮೂಲಕ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಹಿಂದೆ ಕಾವೇರಿ ನೀರು ಹಂಚಿಕೆಯಲ್ಲಿ ನಡೆದ ಹೋರಾಟದ ಮಾದರಿಯಲ್ಲಿಯೇ ಶಾಸ್ತ್ರೀಯ ಸ್ಥಾನಮಾನ ನೀಡುವ ವಿಚಾರದಲ್ಲಿಯೂ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ತಿಳಿಸಿದ ಅವರು, ತಮಿಳುನಾಡು ನಿಲುವು ಬದಲಿಸದಿದ್ದರೆ, ಅದಕ್ಕೆ ತಕ್ಕ ದಂಡ ತರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಭಾಷಾ ತಜ್ಞರ ಸಮಿತಿಯ ಅರ್ಹತೆಯನ್ನೇ ಪ್ರಶ್ನಿಸಿ ಆರ್.ಗಾಂಧಿ ಎಂಬ ವಕೀಲರೊಬ್ಬರು ಗುರುವಾರ ಚೆನ್ನೈ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇದು ಕರವೇ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ.
ಈ ಮಧ್ಯೆ ಈಗಾಗಲೇ ನಾರಾಯಣಗೌಡ ಅಧ್ಯಕ್ಷತೆಯಲ್ಲಿ ಹೋರಾಟದ ರೂಪುರೇಷೆಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
|