ರಾಜ್ಯದ ವಿವಿಧೆಡೆ ಸಂಭವಿಸಿರುವ ಪ್ರಾರ್ಥನಾ ಮಂದಿರಗಳ ದಾಳಿ ಪ್ರಕರಣವನ್ನು ಸಿಓಡಿ ವಹಿಸಿದ್ದನ್ನು ಪ್ರತಿಪಕ್ಷಗಳು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಇದೀಗ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿರುವುದಾಗಿ ಕರ್ನಾಟಕ ಸರ್ಕಾರ ಶುಕ್ರವಾರ ಘೋಷಿಸಿದೆ.
ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ವಿಚಾರಣೆ ನಡೆಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉತ್ತರಕನ್ನಡ ಅಂಕೋಲಾದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ರಾಜ್ಯದ ವಿವಿಧೆಡೆ ಪ್ರಾರ್ಥನಾ ಮಂದಿರಗಳ ಮೇಲೆ ನಡೆದಿರುವ ದಾಳಿಯ ವಿಚಾರಣೆಯನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಡಿಯೂರಪ್ಪ ಅವರು ಸಿಓಡಿಗೆ ವಹಿಸಿದ್ದರು.
ಆದರೆ ಸಿಓಡಿ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ನಡೆಸಲಾರದು ಎಂಬ ವಿರೋಧ ಪಕ್ಷಗಳ ತೀವ್ರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಪ್ರಕರಣದ ವಿಚಾರಣೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ.
ಅಲ್ಲದೇ ಕರ್ನಾಟಕದಾದ್ಯಂತ ಈಗಾಗಲೇ ನಡೆದ ಮತ್ತು ನಡೆಯುತ್ತಿರುವ ಪ್ರಾರ್ಥನಾ ಮಂದಿರಗಳ ದಾಳಿಯ ಕುರಿತಾಗಿ ಇಂದು ಬೆಳಿಗ್ಗೆ ಕೇಂದ್ರ ಗೃಹ ಕಾರ್ಯದರ್ಶಿ ಮಧುಕರ್ ಗುಪ್ತಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಅವರೊಂದಿಗೆ ಮಾತುಕತೆ ನಡೆಸಿದ್ದರು.
ಇನ್ನು ಮುಂದೆಯೂ ರಾಜ್ಯದಲ್ಲಿ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ಮುಂದುವರಿದದ್ದೇ ಆದಲ್ಲಿ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ಈ ಸಂದರ್ಭದಲ್ಲಿ ನೀಡಿದ್ದಾರೆ.
ಆ ನಿಟ್ಟಿನಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಮುಖ ಆದ್ಯತೆ ನೀಡಬೇಕೆಂದು ಗುಪ್ತಾ ಅವರು ಸೂಚಿಸಿರುವುದಾಗಿ ಹೇಳಿದ್ದಾರೆ.
|