ಹಾವೇರಿಯಲ್ಲಿ ನಡೆದಿರುವ ಗೋಲಿಬಾರ್ ಘಟನೆಯ ಕುರಿತು ನ್ಯಾಯಮೂರ್ತಿ ಜಗನ್ನಾಥ ಶೆಟ್ಟಿ ಆಯೋಗವು ತನಿಖೆಯನ್ನು ಚುರುಕುಗೊಳಿಸಿರುವುದಾಗಿ ತಿಳಿಸಿದೆ.
ಈ ಪ್ರಕರಣದ ಕುರಿತು ವಿವರಣೆ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಈ ಪ್ರಕರಣದ ಕುರಿತು ಆಯೋಗದ ಮುಂದೆ ಇದೇ 26ರಂದು ಹಾಜರಾಗುವಂತೆ ತಿಳಿಸಲಾಗಿದೆ.
ರಸಗೊಬ್ಬರ ಅಭಾವದ ಕುರಿತು ರೈತರು ನಡೆಸಿದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರನ್ನು ಹತ್ತಿಕ್ಕಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಲ್ಲದೆ, ಗುಂಡಿನ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ರೈತನೋರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೋರ್ವ ರೈತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
ಇದರಿಂದ ರಾಜ್ಯದೆಲ್ಲೆಡೆ ತೀವ್ರ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಲು ಸರ್ಕಾರ ಆದೇಶ ಹೊರಡಿಸಿತ್ತು.
|