ಬಿಜೆಪಿ ರಾಜ್ಯದಲ್ಲಿ ಅಲ್ಪಸಂಖ್ಯಾತರ ಹಿತ ಕಾಯುವಲ್ಲಿ ವಿಫಲವಾಗಿದ್ದು, ಕೇಂದ್ರ ಸರ್ಕಾರವೇ ಮಧ್ಯ ಪ್ರವೇಶಿಸಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂಬ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆಗ್ರಹಕ್ಕೆ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ದನಿಗೂಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿಪ್ರಿಯ ನಾಡಿನ ಇತಿಹಾಸಕ್ಕೆ ಬಿಜೆಪಿ ಸರಕಾರ ಮಸಿ ಬಳಿದಿದೆ. ಇದರಿಂದ ರಾಜ್ಯದಲ್ಲಿ ಶಾಂತಿ ಸೌಹಾರ್ದತೆಗೆ ಪೆಟ್ಟು ಬಿದ್ದಿದೆ ಎಂದು ಗಂಭೀರ ಆರೋಪ ಮಾಡಿದರು.
ಗೃಹ ಸಚಿವರು ಸ್ವಂತ ಜಿಲ್ಲೆಯಲ್ಲಿದ್ದಾಗಲೇ ಗಲಭೆ ನಡೆದಿರುವುದು ಸರ್ಕಾರ ಹಾಗೂ ಮುಖ್ಯಮಂತ್ರಿಗಳ ದಕ್ಷತೆಯನ್ನು ತೋರಿಸುತ್ತದೆ ಎಂದು ವ್ಯಂಗ್ಯವಾಡಿದ ಅವರು, ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಅಲ್ಲದೆ, ಈ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಇಲ್ಲವೇ ಸಿಬಿಐಗೆ ಈ ತನಿಖೆಯನ್ನು ವಹಿಸಿ ಆರು ತಿಂಗಳಲ್ಲಿ ವರದಿ ನೀಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
|