ದೇಶದ ವಿವಿಧೆಡೆ ನಡೆದ ಬಾಂಬ್ ಸ್ಫೋಟಗಳಿಗೆ ಕರ್ನಾಟಕದಿಂದ ಬಾಂಬ್ ಸರಬರಾಜಾಗಿದ್ದು, ಅದಕ್ಕೆ ವಿದೇಶಗಳಿಂದ ಕಚ್ಚಾವಸ್ತು ಬಳಕೆಯಾಗಿದೆ ಎಂಬ ಆತಂಕಕಾರಿಯಾದ ಮಾಹಿತಿ ಹೊರಬಿದ್ದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಕಠಿಣ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ನಗರಕ್ಕೆ ಭೇಟಿ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾ ವಿದೇಶೀಯರನ್ನು ಪತ್ತೆ ಹಚ್ಚಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಭಯೋತ್ಪಾದನೆ ತೀವ್ರಗೊಳ್ಳಲು ಕೇಂದ್ರ ಸರ್ಕಾರದ ಮೃದು ನೀತಿಯೇ ಕಾರಣ ಎಂದು ಗಂಭೀರ ಆರೋಪ ಮಾಡಿದ ಮುಖ್ಯಮಂತ್ರಿಗಳು, ರಾಜಕೀಯ ಪಕ್ಷಗಳು ಈ ಘಟನೆಗಳನ್ನು ಬೃಹತ್ತಾಗಿ ಪ್ರತಿಬಿಂಬಿಸಿ ಶಾಂತಿ ಕದಡಲು ಯತ್ನಿಸುತ್ತಿವೆ ಎಂದು ಆಪಾದಿಸಿದರು.
ಪಾಸ್‌ಪೋರ್ಟ್, ವೀಸಾ ಅವಧಿ ಮುಗಿದರೂ ಇನ್ನೂ ರಾಜ್ಯದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ, ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಇದೇ ವೇಳೆ, ಪ್ರಾರ್ಥನಾ ಮಂದಿರಗಳ ಮೇಲಿನ ದಾಳಿ ಕುರಿತು ಪ್ರತಿಕ್ರಿಯಿಸಿದ ಅವರು, ಈ ಘಟನೆಯ ಬಗ್ಗೆ ಕೇಂದ್ರ ಸರ್ಕಾರದ ತನಿಖೆಯ ಅವಶ್ಯಕತೆಯೇ ಇಲ್ಲ. ರಾಜ್ಯದ ಗೃಹ ಇಲಾಖೆ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ತಿಳಿಸಿದ್ದಾರೆ. |
|