ಗೋದ್ರಾ ರೈಲು ದುರಂತ ಸೇರಿದಂತೆ ದೇಶಾದ್ಯಂತ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ಸಮುದಾಯದ ಮೇಲೆ ನಡೆಯುತ್ತಿರುವ ಹಿಂಸಾಚಾರದ ಕುರಿತು ಸುಪ್ರೀಂಕೋರ್ಟ್‌ನ ಹಾಲಿ ನ್ಯಾಯಾಮೂರ್ತಿಗಳಿಂದ ತನಿಖೆ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.
ನಗರದಲ್ಲಿ ಸೋಮವಾರಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಧ್ರಾ ರೈಲು ದುರಂತದ ಕುರಿತು ನಾನಾವತಿ ಆಯೋಗ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿರುವುದು ಪ್ರಜಾಪ್ರಭುತ್ವಕ್ಕೆ ಅಪಚಾರವೆಸಗಿದಂತಾಗಿದೆ ಎಂದು ಆರೋಪಿಸಿದ್ದಾರೆ.
ಗೋಧ್ರಾ ಘಟನೆಯ ಸಂದರ್ಭದಲ್ಲಿಯೇ ಆಗಿನ ಪ್ರಧಾನಿ ವಾಜಪೇಯಿ ಅವರಿಗೆ ಪತ್ರ ಬರೆದು ರಾಷ್ಟ್ರೀಯ ಸತ್ಯಶೋಧನಾ ಮತ್ತು ಸೌಹಾರ್ದತಾ ಆಯೋಗವನ್ನು ಸ್ಥಾಪಿಸಿ ತನಿಖೆ ನಡೆಸುವಂತೆ ಆಗ್ರಹಿಸಿದ್ದೆ. ಆದರೆ ಯಾರೂ ಕೂಡ ಕ್ರಮ ಕೈಗೊಳ್ಳಲಿಲ್ಲ ಎಂದು ದೂರಿದರು.
ನಾನಾವತಿ ಹಾಗೂ ಮೆಹತಾ ಆಯೋಗವು ಸಲ್ಲಿಸಿರುವ ವರದಿಯ ಸಾರಾಂಶದಿಂದ ಆಶ್ಚರ್ಯವೇನು ಆಗಿಲ್ಲ. ಆದರೆ ನಿರಾಸೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಮುಂದಿನ ಚುನಾವಣೆಯಲ್ಲಿ ಬಳಸಿಕೊಳ್ಳಲಿದೆ. ಈ ನಿಟ್ಟಿನಲ್ಲಿ ಶೀಘ್ರವೇ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯಾಂಶವನ್ನು ಹೊರತರಬೇಕಿದೆ ಎಂದು ಅವರು ಒತ್ತಾಯಿಸಿದ್ದಾರೆ.
|