ಮೂರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂಬ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮೂರು ತಿಂಗಳೊಳಗೆ ಚುನಾವಣೆ ನಡೆಸಬೇಕೆಂದು ನೀಡಿದ್ದ ಆದೇಶ ಉಲ್ಲಂಘಿಸಿ ನ್ಯಾಯಾಂಗ ನಿಂದನೆ ಮಾಡಲಾಗಿದೆ ಎಂದು ಆಕ್ಷೇಪಿಸಿ ಮಾಜಿ ಮೇಯರ್ ಪಿ.ಆರ್.ರಮೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಇಂದು ಚುನಾವಣಾ ಆಯೋಗ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ನ್ಯಾಯಮೂರ್ತಿಗಳಾದ ಮಂಜುಳಾ ಚೆಲ್ಲೂರ್ ಮತ್ತು ರವಿ ಮಳೀಮಠ್ ಅವರನ್ನೊಳಗೊಂಡ ವಿಭಾಗೀಯ ಪೀಠ ಇಂದು ವಿಚಾರಣೆ ನಡೆಸಿ ನೋಟಿಸ್ ನೀಡಿದೆ.
ಕಳೆದ ಎರಡು ವರ್ಷಗಳಿಂದ ಜನಪ್ರತಿನಿಧಿಗಳಿಲ್ಲದೆ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ದುರ್ಬಳಕೆಯಾಗುತ್ತಿದ್ದು,ಕೂಡಲೇ ಚುನಾವಣೆ ನಡೆಸಿ ಜನಪ್ರತಿನಿಧಿಗಳ ಆಡಳಿತ ರಚಿಸಬೇಕು ಎಂದು ಮಾಜಿ ಮೇಯರ್ ರಮೇಶ್ ಈ ಹಿಂದೆ ಹೈಕೋರ್ಟ್ ಮೆಟ್ಟಿಲೇರಿದ್ದರು.
ಆ ಸಂದರ್ಭದಲ್ಲಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮೂರು ತಿಂಗಳೊಳಗೆ ಪಾಲಿಕೆಗೆ ಚುನಾವಣೆ ನಡೆಸುವಂತೆ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತ್ತು. |
|