ಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯದೊಂದಿಗೆ ಸರಿಯಾಗಿ ಸಹಕರಿಸುತ್ತಿಲ್ಲ ಎಂದು ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತನಿಖಾ ತಂಡ ಭಯೋತ್ಪಾದನೆ ನಿಗ್ರಹದ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಕೇಳಲಿಲ್ಲ. ಬದಲಾಗಿ ರಾಜ್ಯ ಸರ್ಕಾರವೇ ಕೇಂದ್ರಕ್ಕೆ ಈ ಕುರಿತು ವಿವರಣೆ ನೀಡಿದೆ ಎಂದು ತಿಳಿಸಿದರು.
ಅಲ್ಲದೆ, ದೆಹಲಿಯಲ್ಲಿ ನಡೆದಿರುವ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರೊಂದಿಗೆ ರಾಜ್ಯಕ್ಕೆ ಆಗಮಿಸಿದ ಕೇಂದ್ರ ತಂಡ ಹಲವು ಮಾಹಿತಿಗಳನ್ನು ಪಡೆದುಕೊಂಡಿದೆ. ಆದರೆ ರಾಜ್ಯಕ್ಕೆ ಈ ಕುರಿತು ಯಾವುದೇ ಮಾಹಿತಿ ನೀಡಿಲ್ಲ ಎಂದು ಅವರು ಆರೋಪಿಸಿದರು.
ಇದೇ ವೇಳೆ ಚರ್ಚ್ ಮೇಲಿನ ದಾಳಿ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವರು, ಸೆಪ್ಟೆಂಬರ್ 14 ಮತ್ತು 15ರಂದು ನಡೆದ ಘಟನೆ ಹೊರತುಪಡಿಸಿದರೆ ಉಳಿದಂತೆ ಯಾವುದೇ ಗಂಭೀರ ಸ್ವರೂಪದ ಘಟನೆಗಳು ನಡೆದಿಲ್ಲ. ಆದರೆ ಈ ಕುರಿತು ಮಾಧ್ಯಮಗಳು ಹೆಚ್ಚಿನ ಪ್ರಚಾರ ನೀಡಿದಲ್ಲದೆ, ಕೇಂದ್ರ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಪ್ರತಿಕ್ರಿಯೆ ನೀಡಿದೆ ಎಂದು ದೂರಿದರು.
ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ರಾಜ್ಯದ ಎಲ್ಲಾ ಚರ್ಚ್‌ಗಳಿಗೂ ಬಿಗಿ ಬಂದೋ ಬಸ್ತ್ ಏರ್ಪಡಿಸಿದೆ. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. |
|